
ಬೆಂಗಳೂರು, ಸೆ.20: ನನೆಗುದಿಗೆ ಬಿದ್ದಿರುವ ನಿಗಮ-ಮಂಡಳಿಗಳ ನೇಮಕಾತಿಗೆ ಕೊನೆಗೂ ಮೂಹೂರ್ತ ಕೂಡಿ ಬಂದಿದೆ. ಕಾಂಗ್ರೆಸ್ ಹೈಕಮಾಂಡ್ ನೀಡಿರುವ ಸೂಚನೆಯ ಹಿನ್ನೆಲೆಯಲ್ಲಿ ಮಾಸಾಂತ್ಯಕ್ಕೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆಯಿದೆ.ಶನಿವಾರ ನಗರದ ಖಾಸಗಿ ಹೊಟೇಲ್ನಲ್ಲಿ ನಡೆದ ಕೆಪಿಸಿಸಿ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಸೆಪ್ಟಂಬರ್ ಮಾಸಾಂತ್ಯ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ನಿಗಮ, ಮಂಡಳಿಗಳ ನೇಮಕಾತಿ ಪ್ರಕ್ರಿಯೆ ಯನ್ನು ಪೂರ್ಣಗೊಳಿಸಲಾಗುವುದು ಎಂದರು.
ನಿಗಮ, ಮಂಡಳಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಏಕಕಾಲದಲ್ಲಿ ನೇಮಕ ಮಾಡಲು ತೀರ್ಮಾನಿಸಲಾಗಿದೆ.
ಈಗಾಗಲೇ ತಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದೇವೆ ಎಂದು ಅವರು ಹೇಳಿದರು.
25 ಸದಸ್ಯರನ್ನು ಒಳಗೊಂಡ ಪಂಚಾಯತ್ ಸಮಿತಿಗಳನ್ನು ಪಕ್ಷದ ವತಿಯಿಂದ ರಚಿಸುವುದು. ಇಂಧನ ಇಲಾಖೆಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಲು ಕ್ಷೇತ್ರವಾರು ಅಧಿಕಾರೇತರ ವ್ಯಕ್ತಿಗಳನ್ನು ಒಳಗೊಂಡ ಸಲಹಾ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.