ಮಂಗಳೂರು ಮಾರ್ಚ್ 04 : ಈ ವರ್ಷದ ಸಾರ್ವತ್ರಿಕ ದ್ವಿತೀಯ ಪಿ.ಯು.ಸಿ. ಪರೀಕ್ಷೆಗೆ ಜಿಲ್ಲೆಯಿಂದ 34794 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ, ಈ ಬಾರಿಯೂ ದ.ಕ.ಜಿಲ್ಲೆ ರಾಜ್ಯಮಟ್ಟದಲ್ಲಿ ಪಿ.ಯು. ಪರೀಕ್ಷೆ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಕಾಯ್ದುಕೊಳ್ಳುವಂತೆ ಹಾಗೂ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ತಿಳಿಸಿದ್ದಾರೆ.
ಅವರು ಬುಧವಾರ ತಮ್ಮ ಕಛೇರಿಯಲ್ಲಿ ನಡೆದ ಪೂರ್ವಬಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು185 ಪಿ.ಯು.ಕಾಲೇಜುಗಳಿದ್ದು, 52 ಪರೀಕ್ಷಾ ಕೇಂದ್ರಗಳಲ್ಲಿ 34794 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ, ಪರೀಕ್ಷಾ ಕೇಂದ್ರಗಳ ಸುತ್ತ ಪರೀಕ್ಷೆ ನಡೆಯುವ ವೇಳೆ ಯಾವುದೇ ದ್ವನಿವರ್ದಕಗಳನ್ನು ಹಾಕದಿರುವಂತೆ ಹಾಗು ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಳತೆಯಲ್ಲಿರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನಗಳಂದು ಬೆಳಿಗ್ಗೆ 8 ರಿಂದ ಪರೀಕ್ಷೆ ಮುಗಿಯುವವರೆಗೆ ಮುಚ್ಚಿರಬೇಕೆಂದು ಜಿಲ್ಲಧಿಕಾರಿಗಳು ಸೂಚಿಸಿದ್ದಾರೆ. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಪತ್ರ ಬರೆಯಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಕಳೆದ ವರ್ಷ ಜಿಲ್ಲೆಯಲ್ಲಿ ಶೇ.89 %ರಷ್ಟು ಫಲಿತಾಂಶ ದಾಖಲಾಗಿತ್ತು ಈ ಬಾರಿಯೂ ಜಿಲ್ಲೆ ಶೇ.100 ರಷ್ಟು ಫಲಿತಾಂಶ ದಾಖಲಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿದೆ, ಕ್ಲಪ್ತ ಸಮಯಕ್ಕೆ ಎಲ್ಲಾ 52 ಪರೀಕ್ಷಾ ಕೇಂದ್ರಗಳಿಗೂ ಪ್ರಶ್ನೆಪತ್ರಿಕೆಗಳನ್ನು ತಲುಪಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮಯ್ಯ ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರಪ್ಪ ಜಿಲ್ಲೆಯ ಎಲ್ಲಾ ಪಿ.ಯು.ಕಾಲೇಜುಗಳ ಪ್ರಂಶುಪಾಲರು, ಕೇತ್ರಶಿಕ್ಷಣಾಧಿಕಾರಿಗಳು ಭಾಗವಹಿಸಿದ್ದರು.
