ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಿಂದ ಖುಲಾಸೆಗೊಂಡಿರುವ ತಮಿಳುನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧ ಒಂದು ವಾರದೊಳಗೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ಕಾನೂನು ಸಚಿವ ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ.
ಹೈಕೋರ್ಟ್‌ನ ವಿಶೇಷ ಏಕಸದಸ್ಯ ಪೀಠದ ನ್ಯಾಯಮೂರ್ತಿ ಕುಮಾರಸ್ವಾಮಿಯವರ ಆಸ್ತಿ ಮೌಲ್ಯಮಾಪನದಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ ಎಂದು ಸರ್ಕಾರಿ ವಿಶೇಷ ಅಭಿಯೋಜಕ ಬಿ.ವಿ.ಆಚಾರ್ಯ ಅವರ ಹೇಳಿಕೆಯ ಆಧಾರದ ಮೇಲೆ ರಾಜ್ಯಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ ಎಂದು ಕಾನೂನು ಸಚಿವಾಲಯದ ಮೂಲಗಳು ಕಳೆದ ತಿಂಗಳು ತಿಳಿಸಿದ್ದವು.
ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸಚಿವರೊಂದಿಗೆ ಚರ್ಚಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಆಚಾರ್ಯ ಅವರು ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಜಯಚಂದ್ರ ಉತ್ತರಿಸಿದ್ದರು.
ಏತನ್ಮಧ್ಯೆ ಜಯಲಲಿತಾ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ ಬಳಿಕ ತಮಿಳುನಾಡು ಸರ್ಕಾರ ಸೇಡಿನ ಮನೋಭಾವ ಅನುಸರಿಸಿದ್ದು, ಕಾವೇರಿ ನೀರು ಮಲಿನಗೊಳ್ಳುತ್ತಿದೆಯೆಂದು ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಈ ಕುರಿತು ಮಧ್ಯಪ್ರವೇಶಿಸುವಂತೆ ಅದು ಕೋರ್ಟ್‌ಗೆ ಮನವಿ ಮಾಡಿದೆ. ಮೇಲ್ಮನವಿ ಸಲ್ಲಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ನಾಚಿಕೆಗೇಡು ಎಂದು ಅಣ್ಣಾಡಿಎಂಕೆ ಖಂಡಿಸಿದೆ.
