ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರದಲ್ಲಿರುವ ಸಂದರ್ಭದಲ್ಲೇ, ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರು ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಎದುರಿಸುವಂತಹ ಸ್ಥಿತಿ ಬದ್ರೂ ಬರಬಹುದು. ಅದನ್ನು ತಳ್ಳಿಹಾಕುವಂತಿಲ್ಲ ಎಂದಿದ್ದಾರೆ.
ಸದ್ಯದ ಸಂದರ್ಭದಲ್ಲಿ ದೇಶ ವಿರೋಧಿ, ಸಂವಿಧಾನ ವಿರೋಧಿ ಶಕ್ತಿಗಳು ಬಲಗೊಳ್ಳುತ್ತಿವೆ. ಇದರಿಂದ ದೇಶದ ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟಾಗುತ್ತದೆ. ಆದರೆ ದೇಶದಲ್ಲಿ ಸಂವಿಧಾನ ಮತ್ತು ಕಾನೂನು ವ್ಯವಸ್ಥೆ ತುಂಬಾ ಶಕ್ತಿಶಾಲಿಯಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಅಡ್ವಾಣಿ ನಡುವಿನ ಸಂಬಂಧ ಅಷ್ಟಕಷ್ಟೇ ಎಂಬುದು ಬಹಿರಂಗವಾದ ಸತ್ಯ. ಅಲ್ಲದೇ ಮೋದಿ ಕೆಲವು ಮಸೂದೆಗಳನ್ನು ಸುಗ್ರೀವಾಜ್ಞೆ ಮೂಲಕ ಹೊರಡಿಸುತ್ತಿರುವುದು, ಸಂವಿಧಾನವನ್ನು ಕಡೆಗಣಿಸುತ್ತಿದ್ದಾರೆ ಎಂಬ ಅಸಮಾಧಾನದ ಹಿನ್ನೆಲೆಯಲ್ಲಿ ಅಡ್ವಾಣಿ ಈ ರೀತಿ ಹೇಳಿಕೆ ನೀಡಿದ್ದಾರೆಂಬುದಾಗಿ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಈ ಬಗ್ಗೆ ಬಿಜೆಪಿ ಉತ್ತರ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.
1975ರಲ್ಲಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಜೂನ್ 25ಕ್ಕೆ 40 ವರ್ಷ ತುಂಬಲಿರುವ ಹಿನ್ನೆಲೆಯಲ್ಲಿ ದ ಇಂಡಿಯನ್ ಎಕ್ಸ್ ಪ್ರೆಸ್ ದೈನಿಕಕ್ಕೆ ಎಲ್.ಕೆ.ಅಡ್ವಾಣಿ ನೀಡಿದ್ದ ಸಂದರ್ಶನದಲ್ಲಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದೇಶದಲ್ಲಿ 1975-77ರವರೆಗೆ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಹಾಗಂತ ನಾಗರಿಕರ ಮೂಲಭೂತ ಹಕ್ಕುಗಳನ್ನು ಮತ್ತೆ ಕಸಿಯಲ್ಲ ಎಂಬ ನಂಬಿಕೆ ಇಲ್ಲ. ನಿಜಕ್ಕೂ ಇದನ್ನು ತುಂಬಾ ಸುಲಭವಾಗಿ ಮಾಡಲು ಸಾಧ್ಯವಿಲ್ಲ. ಆದರೆ ಈ ಪರಿಸ್ಥಿತಿ ಮತ್ತೆ ಪುನರಾವರ್ತನೆಯಾಗಲ್ಲ ಎಂದು ಹೇಳಲ್ಲ. ಕೆಲವು ಶಕ್ತಿಗಳು ಪ್ರಜಾಪ್ರಭುತ್ವದ ಶಕ್ತಿ ಕುಂದಿಸಿ, ತುರ್ತು ಪರಿಸ್ಥಿತಿ ಬರಲ್ಲ ಎಂಬುದನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂಬುದಾಗಿ ಕಳವಳ ವ್ಯಕ್ತಪಡಿಸಿದ್ದಾರೆ.
