ಮಂಗಳೂರು, ಅ.06 : ಈಗಾಗಲೇ ಆರೋಗ್ಯ ಶ್ರೀ ಯೋಜನೆಯಡಿ ಕ್ಯಾನ್ಸರ್, ಕಿಡ್ನಿ, ಹೃದಯದ ಸಮಸ್ಯೆ ಸೇರಿದಂತೆ ಗಂಭೀರ ತೆರನಾದ ಎಂಟು ರೋಗಗಳಿಗೆ ಉಚಿತ ಆರೋಗ್ಯ ಸೇವೆ ಒದಗಿಸಲಾಗುತ್ತಿದ್ದು, ಮುಂದಿನ ವರ್ಷದಿಂದ ಗಂಭೀರವಲ್ಲದ ಕಾಯಿಲೆಗಳಿಗೂ ಉಚಿತ ಆರೋಗ್ಯ ಸೇವೆ ಒದಗಿಸುವ ಕುರಿತಂತೆ ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಸೋಮವಾರ ನಗರದ ಡಾ.ಟಿಎಂಎ ಪೈ ಸಭಾಂಗಣದಲ್ಲಿ ಆಯೋಜಿಸಿದ್ದ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾರ್ಯಕ್ರಮ ಮತ್ತು ಚುನಾಯಿತ ಜನಪ್ರತಿನಿಧಿಗಳಿಗೆ ಆರೋಗ್ಯ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡುತ್ತಿದ್ದರು.ಮುಖ್ಯಮಂತ್ರಿ ಒಪ್ಪಿಗೆ ನೀಡಿದಲ್ಲಿ ಮುಂದಿನ ವರ್ಷದಿಂದಲೇ ಈ ಯೋಜನೆ ಜಾರಿಯಾಗಲಿದೆ ಎಂದು ಅವರು ತಿಳಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕ ಜೆ.ಆರ್.ಲೋಬೊ ಅಧ್ಯಕ್ಷತೆ ವಹಿಸಿದ್ದರು.
ಪ್ರಸ್ತುತ ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ ಬಿಪಿಎಲ್ ಕಾರ್ಡ್ ದಾರರು ಮತ್ತು ರಾಜೀವ್ ಆರೋಗ್ಯ ಭಾಗ್ಯ ಯೋಜನೆಯಡಿ ಎಪಿಎಲ್ ಕಾರ್ಡ್ ಹೊಂದಿರುವವರು ಗಂಭೀರ ಸಮಸ್ಯೆಗೆ ಒಳಗಾದಾಗ ಅವರಿಗೆ ಉಚಿತ ಆರೋಗ್ಯ ಸೇವೆ ನೀಡಲಾಗುತ್ತಿತ್ತು. ಇದನ್ನು ವಿಸ್ತರಿಸುವ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಮೂಳೆ ಮುರಿತ, ಉಚಿತ ಕಣ್ಣಿನ ಶಸಚಿಕಿತ್ಸೆ ಸೇರಿದಂತೆ ಇನ್ನಿತರ ಆರೋಗ್ಯ ಸಮಸ್ಯೆಗಳನ್ನು ಎರಡನೆ ಹಂತದಲ್ಲಿ ಜೋಡಿಸುವ ಚಿಂತನೆ ಇದೆ ಎಂದು ಸಚಿವರು ಹೇಳಿದರು.
ಅಸಾಂಕ್ರಾಮಿಕ ಕಾಯಿಲೆಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಯೋಜನೆಗಳನ್ನು ಪ್ರಾಯೋಗಿಕವಾಗಿ ದ.ಕ. ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕರ್ನಾಟಕ ಆರೋಗ್ಯ ವ್ಯವಸ್ಥೆ ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯ ಮೂಲಕ ಅಸಾಂಕ್ರಾಮಿಕ ರೋಗಗಳನ್ನು ಶೀಘ್ರವೇ ಪತ್ತೆಹಚ್ಚಿ ಜನರಿಗೆ ಆರೋಗ್ಯ ಸೇವೆ ನೀಡಲಾಗುವುದು. ಈ ಯೋಜನೆ ಇಲ್ಲಿ ಯಶಸ್ಸು ಕಂಡರೆ ಮುಂದೆ ರಾಜ್ಯ ವ್ಯಾಪಿ ವಿಸ್ತರಿಸಲಾಗುವುದು ಎಂದವರು ಹೇಳಿದರು.
ಜಿಪಂ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಶಾಸಕಿ ಶಕುಂತಳಾ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮೇಯರ್ ಜೆಸಿಂತಾ ವಿಜಯಾ ಆಲ್ಫ್ರೆಡ್, ಜಿಪಂ ಉಪಾಧ್ಯಕ್ಷ ಸತೀಶ್ ಕುಂಪಲ, ಉಪಮೇಯರ್ ಪುರುಷೋತ್ತಮ ಚಿತ್ರಾಪುರ, ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಸಿ.ಕೆ.ಚಂದ್ರಕಲಾ, ಪಾಲಿಕೆ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಪ್ರಕಾಶ್ ಬಿ.ಸಾಲ್ಯಾನ್, ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕಿ ಸೌಜನ್ಯಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ನಿರ್ದೇಶಕ ಡಾ.ಜಿ.ಎಂ.ವಾಮದೇವ, ಡಬ್ಲುಎಚ್ಒ ಪ್ರತಿನಿಧಿ ಡಾ.ಜಾರ್ಜ್ ಗೋರೆ ಮುಖ್ಯ ಅತಿಥಿಗಳಾಗಿದ್ದರು.
ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ, ಜಿಪಂ ಸಿಇಒ ಪಿ.ಐ.ಶ್ರೀವಿದ್ಯಾ, ಜಿಲ್ಲಾ ನೋಡಲ್ ಅಧಿಕಾರಿ ಡಾ.ಪ್ರಕಾಶ್ ಕುಮಾರ್ ಬಿ.ಜಿ., ಎನ್ಸಿಡಿ ಉಪನಿರ್ದೇಶಕಿ ಡಾ.ಪದ್ಮಾ ಎಂ.ಆರ್., ವೆನ್ಲಾಕ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕಿ ಡಾ.ರಾಜೇಶ್ವರಿದೇವಿ ಉಪಸ್ಥಿತರಿದ್ದರು.
ಡಿಎಚ್ಒ ಡಾ.ರಾಮಕೃಷ್ಣ ರಾವ್ ಎಂ.ಸ್ವಾಗತಿ ಸಿದರು. ಜಯರಾಮ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.









