ಕರ್ನಾಟಕ

ವಾಲ್ಮೀಕಿ ಅಧ್ಯಯನ ಕೇಂದ್ರ ಸ್ಥಾಪನೆ: ಆಂಜನೇಯ

Pinterest LinkedIn Tumblr

Anjaneಬೆಂಗಳೂರು, ಅ.27: ಮಹರ್ಷಿ ವಾಲ್ಮೀಕಿ ಹೆಸರಿನಲ್ಲಿ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರವನ್ನು ಸ್ಥಾಪನೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಘೋಷಿಸಿದ್ದಾರೆ.
ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಾಲ್ಮೀಕಿ ಅವರ ತತ್ವ, ಆದರ್ಶಗಳು ಹಾಗೂ ಮೂಲ ರಾಮಾಯಣ ಮಹಾಕಾವ್ಯ, ಬುಡಕಟ್ಟು ಜನಾಂಗಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಅಧ್ಯಯನ ಹಾಗೂ ಸಂಶೋಧನೆ ನಡೆಸಲು ಅನುಕೂಲವಾಗುವಂತೆ ಈ ಕೇಂದ್ರವನ್ನು ಸ್ಥಾಪನೆ ಮಾಡಲಾಗುವುದು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಬೆಂಗಳೂರು ಸುತ್ತಮುತ್ತ ಈ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರಕ್ಕಾಗಿ 10 ಎಕರೆ ಸರಕಾರಿ ಭೂಮಿ ಗುರುತಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದ ಅವರು, ವಾಲ್ಮೀಕಿ ಬಗ್ಗೆ ಅಪ್ರಚಾರ ಮಾಡುವಂತಹ ದುಷ್ಟ ಶಕ್ತಿಗಳನ್ನು ಹತ್ತಿಕ್ಕಲು ಸರಕಾರ ಕ್ರಮ ಕೈಗೊಳ್ಳಲಿದೆ ಎಂದರು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಸಿ.ಬಸವರಾಜು, ಸಮಾಜ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪರಿಶಿಷ್ಟರಿಗೆ ಎರಡು ಸಚಿವ ಸ್ಥಾನ ನೀಡಿ
ಪರಿಶಿಷ್ಟ ಸಮುದಾಯಕ್ಕೆ ಸೇರಿದ ಆಂಜನೇಯ ಈಗಾಗಲೇ ಸಚಿವ ಸಂಪುಟದಲ್ಲಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಸಂದರ್ಭದಲ್ಲಿ ಸಮುದಾಯದ ಇನ್ನೂ ಇಬ್ಬರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸಿಕೊಡಬೇಕು.
– ಪ್ರಸನ್ನಾನಂದಪುರಿ ಮಹಾಸ್ವಾಮಿ, ಶ್ರೀ ವಾಲ್ಮೀಕಿ ಗುರುಪೀಠ

Write A Comment