ಬೆಂಗಳೂರು, ನ.2-ನಾನು ಗೋಮಾಂಸ ಸೇವನೆ ಮಾಡುತ್ತೇನೆ ಎಂದು ಹೇಳುವ ಮೂಲಕ ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಬೇಷರತ್ ಕ್ಷಮೆ ಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ಆಹಾರ ಪದ್ಧತಿ ಅವರವರ ವೈಯಕ್ತಿಕ ವಿಚಾರವಾದರೂ ನಾನು ಇಂತಹದ್ದನೆಲ್ಲ ಸೇವನೆ ಮಾಡುತ್ತೇನೆಂದು ಹೇಳಿರುವುದು ತಪ್ಪು. ಇದರಿಂದ ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ಬರಲಿದ್ದು ತಕ್ಷಣವೇ ಇವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕೆಂದು ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಆಗ್ರಹಿಸಿದರು. ಮುಖ್ಯಮಂತ್ರಿಯವರ ಹೇಳಿಕೆ ಖಂಡಿಸಿ ಟೌನ್ಹಾಲ್ ಮುಂಭಾಗ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಭಾರತದಲ್ಲಿ ಗೋವುಗಳನ್ನು ಹಿಂದೂ ಸಮುದಾಯ ಪೂಜ್ಯ ಭಾವನೆಯಿಂದ ಕಾಣುತ್ತದೆ. ಪ್ರಾಚೀನ ಕಾಲದಿಂದಲೂ ನಮ್ಮ ಸಮಾಜ ಗೋವನ್ನು ಕಾಮಧೇನುವೆಂದು ಪರಿಗಣಿಸಿದೆ. ಅದನ್ನೇ ನಾನು ಸೇವನೆ ಮಾಡುತ್ತೇನೆಂದು ಹೇಳುವುದು ಹಲವರ ಭಾವನೆಗೆ ನೋವು ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೂಡಲೇ ಮುಖ್ಯಮಂತ್ರಿಗಳು ತಮ್ಮ ಹೇಳಿಕೆ ಹಿಂಪಡೆದು ಕ್ಷಮಾಪಣೆ ಕೇಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಅವರ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಲ್ಪಸಂಖ್ಯಾತರನ್ನು ಓಲೈಸಿಕೊಳ್ಳಲು ಮುಖ್ಯಮಂತ್ರಿ ಇಂತಹ ಕ್ಷುಲ್ಲಕ ಹೇಳಿಕೆ ನೀಡಿದ್ದಾರೆ. ನೀವು ಏನನ್ನು ಬೇಕಾದರೂ ತಿನ್ನಿ. ಅದು ನಿಮ್ಮ ಮನೆಗೆ ಮಾತ್ರ ಸೀಮಿತವಾಗಿರಬೇಕು. ನಾನು ಗೋಮಾಂಸ ತಿನ್ನುತ್ತೇನೆಂದು ಹೇಳುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಕಾಂಗ್ರೆಸ್ ತನ್ನ ಆಡಳಿತ ವೈಫಲ್ಯ ಮರೆಮಾಚಲು ಹಿಂದೂಗಳ ಭಾವನೆಯೊಂದಿಗೆ ಚೆಲ್ಲಾಟವಾಡಲು ಮುಂದಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿರುವ ರಾಜ್ಯ ಸರ್ಕಾರ ಈಗ ವಿಷಯಾಂತರ ಮಾಡಲು ಹೊರಟಿದೆ ಎಂದು ಅಶೋಕ್ ಕಿಡಿಕಾರಿದರು. ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ಜನರಿಂದ ದೂರವಾಗುತ್ತಿದೆ. ಮಾಡಬಾರದ ಕೆಲಸಗಳನ್ನು ಮಾಡಿ ಲೋಕಸಭೆ ಚುನಾವಣೆ ಸೇರಿದಂತೆ ಅನೇಕ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದೆ. ಆದರೂ ಎಚ್ಚೆತ್ತುಕೊಳ್ಳದ ನಾಯಕರು ಜನರ ಭಾವನೆಗಳ ರಾಜಕಾರಣ ಮಾಡಲು ಹೊರಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.
ಶಾಸಕ ವಿಜಯ್ಕುಮಾರ್, ಬಿಬಿಎಂಪಿ ಸದಸ್ಯರಾದ ಪದ್ಮನಾಭರೆಡ್ಡಿ ಸೇರಿದಂತೆ ಮತ್ತಿತರರು ಹಾಜರಿದ್ದರು.