ಬೆಂಗಳೂರು, ನ.17: ರಾಜಧಾನಿ ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ‘ಬಿಎಂಆರ್ಡಿಎ ಮಾಸ್ಟರ್ಪ್ಲಾನ್-2030’ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಬೆಂಗಳೂರು ನಗಾರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಇದಲ್ಲದೆ, ಬಿಎಂಟಿಸಿಗೆ ಒಂದು ಸಾವಿರ ಕೋಟಿ ರೂ.ವೆಚ್ಚದಲ್ಲಿ ಹೊಸದಾಗಿ 3,500 ಬಸ್ಗಳನ್ನು ಖರೀದಿಸಲು ಚಿಂತನೆ ನಡೆಸಲಾಗಿದೆ. ವೈಟ್ಫೀಲ್ಡ್ಗೆ ಸಂಪರ್ಕ ಕಲ್ಪಿಸುವ ಹೊರ ವರ್ತುಲ ರಸ್ತೆಯನ್ನು ಭೂ ಮಾಲಕರ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು.
ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕಾರ್ಯವು ಸದ್ಯಕ್ಕೆ ಸ್ಥಗಿತವಾಗಿದೆ. ಮಳೆ ನಿಂತ ನಂತರ ತ್ವರಿತವಾಗಿ ಗುಂಡಿ ಮುಚ್ಚುವ ಕೆಲಸವನ್ನು ಆರಂಭಿಸಲಾಗುವುದು ಎಂದು ಜಾರ್ಜ್ ತಿಳಿಸಿದರು.