
ಬೆಂಗಳೂರು, ಡಿ. 12: ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಶೌಚಾಲಯ ಸೌಲಭ್ಯ ಒದಗಿಸುವಂತೆ ಸುಪ್ರೀಂಕೋರ್ಟ್ ಹೊರಡಿಸಿರುವ ಆದೇಶ ಪಾಲನೆಯಾಗದಿದ್ದರೆ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಕೈಗೆತ್ತಿಕೊಳ್ಳಿ ಎಂದು ಸುಪ್ರೀಂಕೋರ್ಟಿನ ನ್ಯಾಯಮೂರ್ತಿ ವಿ. ಗೋಪಾಲಗೌಡ ರಾಜ್ಯ ಉಚ್ಛ ನ್ಯಾಯಾಲಯ ಹಾಗೂ ಕಾನೂನು ಸೇವಾ ಪ್ರಾಧಿಕಾರಕ್ಕೆ ಸಲಹೆ ಮಾಡಿದರು.
ಗ್ರಾಮೀಣ ಭಾಗದಲ್ಲಿರುವ ಲಕ್ಷಾಂತರ ಶಾಲೆಗಳಲ್ಲಿ ಶೌಚಾಲಯ ಸೌಲಭ್ಯ ಒದಗಿಸುವಂತೆ 2014ರಲ್ಲಿ ಸುಪ್ರೀಂಕೋರ್ಟ್ ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ. ರಾಜ್ಯದಲ್ಲೂ ಈ ಆದೇಶ ಪಾಲನೆಯಾಗುವಂತೆ ನ್ಯಾಯಾಲಯ ನೋಡಿಕೊಳ್ಳಬೇಕು. ಸರ್ಕಾರ ಆದೇಶ ಪಾಲಿಸದಿದ್ದರೆ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆಯನ್ನು ಸ್ವಯಂ ಆಗಿ ಕೈಗೆತ್ತಿಕೊಂಡು, ಮುಖ್ಯ ಕಾರ್ಯದರ್ಶಿ, ಶಿಕ್ಷಣ ಇಲಾಖೆ, ಲೋಕೋಪಯೋಗಿ ಸಚಿವರಿಗೆ ಸಮನ್ಸ್ ಜಾರಿ ಮಾಡುವಂತೆ ಅವರು ಹೇಳಿದರು.
ನಗರದ ಉಚ್ಛ ನ್ಯಾಯಾಲಯದಲ್ಲಿಂದು ಆಯೋಜಿಸಲಾಗಿದ್ದ ರಾಷ್ಟ್ರೀಯ ಲೋಕ ಅದಾಲತ್‌ನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಮಹತ್ತರ ಅಧಿಕಾರ ಇದೆ. ಈ ಅಧಿಕಾರ ಬಳಸಿ, ಸರ್ಕಾರಿ ಅಧಿಕಾರಿಗಳಿಗೆ ಸಮನ್ಸ್ ಜಾರಿ, ಜನ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಅವರು ಕಿವಿಮಾತು ಹೇಳಿದರು.
ಕಾನೂನು ಸೇವಾ ಪ್ರಾಧಿಕಾರಕ್ಕೆ ಶಾಸನಬದ್ಧವಾದ ಅಧಿಕಾರ ಇದ್ದು, ಕಾರ್ಯಾಂಗಕ್ಕೆ ಸೂಚನೆ ನೀಡುವ ಅಧಿಕಾರವೂ ಇದೆ. ಜನಪರ ಕಾಳಜಿ ಹಾಗೂ ಬದ್ಧತೆ ಇದ್ದರೆ ಬಡವರಿಗೆ, ದುಡಿಯುವ ಶ್ರಮಿಕ ವರ್ಗದವರಿಗೆ ನ್ಯಾಯ ಒದಗಿಸಬಹುದಾಗಿದೆ ಎಂದರು.
ಇದೇ ದೇಶಕ್ಕೆ ಹೋಲಿಸಿದರೆ ರಾಜ್ಯದ ಕಾನೂನು ಸೇವಾ ಪ್ರಾಧಿಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಈ ಬಗ್ಗೆ ಅರಿವು ಮೂಡಿಸುವ ಕೆಲಸ ಕಾನೂನು ಸೇವಾ ಪ್ರಾಧಿಕಾರ ಮಾಡಿದೆ. ಹಳೇ ಮೈಸೂರು, ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದರು.
ಕಾನೂನು ಸೇವಾ ಪ್ರಾಧಿಕಾರ ನಿಯಮಿತವಾಗಿ ಲೋಕ್ ಅದಾಲತ್ ನಡೆಸಿ ಮೊಕದ್ದಮೆಗಳ ತ್ವರಿತ ವಿಲೇವಾರಿಗೆ ಮುಂದಾಗಬೇಕು. ಸರ್ಕಾರ ಈ ಸೇವಾ ಪ್ರಾಧಿಕಾರಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ವಿವಿಧ ಇಲಾಖೆಗಳಿಗೆ ಸೂಚಿಸಬೇಕು ಎಂದರು.
ನ್ಯಾಯಾಲಯದಲ್ಲಿ ಮೊಕದ್ದಮೆಗಳ ಬಾಕಿಗೆ ನ್ಯಾಯಾಂಗ ಕಾರಣವಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗುತ್ತಿರುವುದು ಮತ್ತು ಅಗತ್ಯಕ್ಕೆ ತಕ್ಕಂತೆ ನ್ಯಾಯಾಲಯಗಳ ಸ್ಥಾಪನೆ ಆಗಬೇಕಿದೆ ಎಂದರು.
36 ಲಕ್ಷ ಪ್ರಕರಣ ವಿವೇವಾರಿ
ಇದೇ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ, ಈ ವರ್ಷ ಲೋಕ ಅದಾಲತ್ ಮೂಲಕ ರಾಜ್ಯದಲ್ಲಿ ಸುಮಾರು 36 ಲಕ್ಷ 23 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದರು.
ಲೋಕ ಅದಾಲತ್ ಜನರ ನ್ಯಾಯಾಲಯ ಹಿಂದೆ ಹಳ್ಳಿಗಳಲ್ಲಿ ಇದ್ದ ಪಂಚಾಯ್ತಿಗಳಿಗೆ ಶಾಸನಬದ್ಧ ಅಧಿಕಾರಿ ನೀಡಿ ಲೋಕ ಅದಾಲತ್ ರೂಪಿಸಲಾಗಿದೆ ಎಂದರು.
ಸಮಾರಂಭದಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಹಾಗೂ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎನ್.ಕೆ. ಪಾಟೀಲ್, ಸದಸ್ಯ ಕಾರ್ಯದರ್ಶಿ ನಿಜಗಣ್ಣನವರ, ರಾಜ್ಯದ ಅಡ್ವೊಕೇಟ್ ಜನರಲ್ ಮಧುಸೂಧನ್ ನಾಯಕ್, ವಿ.ಆರ್. ಪಾಟೀಲ್, ವಕೀಲರ ಸಂಘದ ಅಧ್ಯಕ್ಷ ಶಿವರಾಮು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.