
ಮಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜನ ಮತ ಚಲಾಯಿಸಲಿದ್ದಾರೆ. ರಾಜ್ಯ ಸರ್ಕಾರದ ಜನ ಹಾಗೂ ರೈತ ವಿರೋಧಿ ನೀತಿಯನ್ನು ವಿರೋಧಿಸಿ ಬಿಜೆಪಿಗೆ ಮತ ನೀಡಲಿದ್ದಾರೆ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.
ಬುಧವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ ಹಾಗೂ ಸಚಿವರು ನಿದ್ರೆಯಲ್ಲಿದ್ದಾರೆ. ಇದಕ್ಕೆ ಉತ್ತಮ ಉದಾಹರಣೆ ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ. ಜನ ರಾಜ್ಯ ಸರ್ಕಾರದ ವಿರುದ್ಧ ಎಚ್ಚೆತ್ತಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಪಂಚಾಯತ್ ರಾಜ್ ವ್ಯವಸ್ಥೆಯ ಬಲಪಡಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ, ಈಗಿನ ಸರ್ಕಾರ ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತಿದೆ. ಗ್ರಾಮೀಣ ಭಾಗದಲ್ಲಿ 9/11 ಅರ್ಜಿಯ ಬಗ್ಗೆ ಉಂಟಾಗಿರುವ ಗೊಂದಲಕ್ಕೆ ಕಾಂಗ್ರೆಸ್ ಮುಖಂಡರೇ ಕಾರಣ. ಸರ್ಕಾರ 9/11 ಬಿ ಅರ್ಜಿ ಸಲ್ಲಿಕೆಗೆ ತಾತ್ಕಾಲಿಕ ತಡೆ ನೀಡಿದೆ. ಆದರೆ, ಕಾಂಗ್ರೆಸ್ ಮುಖಂಡರು 9/11 ಅರ್ಜಿ ಸಲ್ಲಿಕೆಗೆ ತಡೆ ನೀಡಲಾಗಿದೆ ಎಂದು ಜನರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ದಕ್ಷ ಅಧಿಕಾರಿಗಳ ಎತ್ತಂಗಡಿ, ಭ್ರಷ್ಟ ಅಧಿಕಾರಿಗಳಿಗೆ ಬೆಂಬಲ ಹಾಗೂ ಮರಳು ದಂಧೆಯಲ್ಲಿ ಸಚಿವರು ಭಾಗಿಯಾಗಿರುವುದು ಕಾಂಗ್ರೆಸ್ ನ ದುರಾಡಳಿತಕ್ಕೆ ಸಾಕ್ಷಿಯಾಗಿದೆ. ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಅನರ್ಹ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಮೀಸಲಾತಿ ಪ್ರಮಾಣ ಪತ್ರ ನೀಡಿರುವುದು ಅಧಿಕಾರ ದುರುಪಯೋಗಕ್ಕೆ ಸೂಕ್ತ ಉದಾಹರಣೆಯಾಗಿದೆ ಎಂದು ಕಾರ್ನಿಕ್ ಆರೋಪಿಸಿದರು.
ವಿಧಾನ ಪರಿಷತ್ ನ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಪಾಲಿಕೆಯ ವಿರೋಧ ಪಕ್ಷದ ನಾಯಕ ಸುಧೀರ್ ಶೆಟ್ಟಿ, ಪಕ್ಷದ ಮುಖಂಡರಾದ ಕಿಶೋರ್ ರೈ, ಪ್ರಭಾ ಮಾಲಿನಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು,