ನವದೆಹಲಿ, ಮಾ.10- ನಾಗರಿಕರಿಗೆ ಕಿರಿಕಿರಿ ಉಂಟುಮಾಡುವ ಬೀದಿನಾಯಿಗಳ ನಿಯಂತ್ರಣಕ್ಕೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಮಿತಿಯಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಅಥವಾ ಲಸಿಕೆ ನೀಡುವ ಕ್ರಮ ಕೈಗೊಳ್ಳಿ ಎಂದು ಸರ್ವೋಚ್ಚ ನ್ಯಾಯಾಲಯ ರಾಜ್ಯ ಹಾಗೂ ಸ್ಥಳೀಯ ಸಂಸ್ಥೆಗಳ ಆಡಳಿತಗಳಿಗೆ ನಿರ್ದೇಶನ ನೀಡಿದೆ. ಮನುಷ್ಯರು ಮತ್ತು ಪ್ರಾಣಿಗಳ ನಡುವೆ ಸಮತೋಲನ ಕಾಪಾಡುವುದು ಅತ್ಯಗತ್ಯವಾಗಿದೆ. ಯಾವುದೇ ಕಾರಣಕ್ಕೂ ಬೀದಿನಾಯಿಗಳ ಮೇಲೆ ಕ್ರೌರ್ಯದ ಚಟುವಟಿಕೆ ನಡೆಸಬಾರದು ಎಂದು ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.
ಬೀದಿ ನಾಯಿಗಳಿಂದಾಗುವ ತೊಂದರೆಗಳ ಬಗ್ಗೆ ನಾಗರಿಕರು ಸಲ್ಲಿಸಿದ್ದ ಅರ್ಜಿಗಳು, ಪ್ರಾಣಿಗಳ ಕಲ್ಯಾಣ ಮಂಡಳಿಯವರು ಬಾಂಬೆ ಹೈಕೋರ್ಟ್, ಕೇರಳ ಹೈಕೋರ್ಟ್ ಸೇರಿದಂತೆ ಹಲವು ನ್ಯಾಯಾಲಯಗಳಲ್ಲಿ ಸಲ್ಲಿಸಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ ಪೀಠ ಬೀದಿ ನಾಯಿಗಳ ಕಾಟ ನಿಯಂತ್ರಣಕ್ಕೆ ಮೇಲಿನಂತೆ ಹೇಳಿದೆ. 2015ರ ಸಾಲಿನಲ್ಲೇ ನಗರದಲ್ಲಿ 46 ಸಾವಿರ ಬೀದಿ ನಾಯಿ ಕಡಿತ ಪ್ರಕರಣಗಳು ನಡೆದಿದ್ದು, ರೇಬೀಸ್‌ನಿಂದ ಮೃತಪಟ್ಟವರ ಸಂಖ್ಯೆಯೂ ಗಣನೀಯವಾಗಿದೆ ಎಂದು ಪ್ರಮುಖ ಪ್ರತಿವಾದಿಯಾಗಿರುವ ಬೃಹನ್ಮುಂಬಯಿ ಮುನಿಸಿಪಲ್ ಕಾರ್ಪೊರೇಷನ್ (ಬಿಎಂಸಿ) ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿತ್ತು.