
ಬೆಂಗಳೂರು: ಯಾವುದೇ ಕಾರಣಕ್ಕೂ ಬಿಬಿಎಂಪಿಯಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಬಾರದೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಟ್ಟಾಜ್ಞೆ ವಿಧಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆ ನಡೆಯುವರೆಗೂ ಜೆಡಿಎಸ್ ಜತೆ ಯಾವುದೇ ರೀತಿಯ ಮೈತ್ರಿ ಮಾಡಿಕೊಳ್ಳಬಾರದು, ಕೇಂದ್ರ ನಾಯಕರ ಅಪೇಕ್ಷೆಯೂ ಇದೇ ಆಗಿದೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್‌ಗೆ ಫರ್ಮಾನು ಹೊರಡಿಸಿದ್ದಾರೆ. ಸೆಪ್ಟೆಂಬರ್ ತಿಂಗಳ ಮಧ್ಯದಲ್ಲಿ ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆಯಲಿದ್ದು ಕಾಂಗ್ರೆಸ್‌ಗೆ ಕೈಕೊಟ್ಟು ಜೆಡಿಎಸ್ ಜತೆ ಬಿಜೆಪಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ಮಾತುಗಳು ಕೇಳಿ ಬರುತ್ತಿದ್ದವು.
ಈ ಸಂಬಂಧ ಆರ್.ಅಶೋಕ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತೆರೆಮರೆಯ ಮಾತುಕತೆ ನಡೆಸಿ ಮೈತ್ರಿಗೆ ಸಿದ್ಧತೆ ನಡೆಸಿದ್ದರು. ಆದರೆ ಇದಕ್ಕೆ ಬ್ರೇಕ್ ಹಾಕಿರುವ ಯಡಿಯೂರಪ್ಪ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲೇ ಬಾರದು, ಅಗತ್ಯವಾದರೆ ಪ್ರತಿಪಕ್ಷದ ಸ್ಥಾನದಲ್ಲಿ ಕುಳಿತು ರಚನಾತ್ಮಕ ಕೆಲಸ ಮಾಡಬೇಕು. ಕೆಲವರ ಹಿತಕ್ಕಾಗಿ ಪಕ್ಷವನ್ನು ಬಲಿ ಕೊಡಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಯಡಿಯೂರಪ್ಪ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವ ಬದಲು ಪ್ರತಿಪಕ್ಷದ ಸ್ಥಾನದಲ್ಲಿ ಕೂರುವುದೇ ಲೇಸು ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಬಿಬಿಎಂಪಿ ಚುನಾವಣೆ ವೇಳೆ ಮಾತೃ ಪಕ್ಷಕ್ಕೆ ಆಗಮಿಸಿದ್ದ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಬೇಕೆಂದು ಚುನಾವಣಾ ಉಸ್ತುವಾರಿಯಾಗಿದ್ದ ಆರ್.ಅಶೋಕ್‌ಗೆ ಸೂಚಿಸಿದ್ದರು.
ಯಡಿಯೂರಪ್ಪನವರ ಮನವಿಯನ್ನು ಕಸದ ಬುಟ್ಟಿಗೆ ಹಾಕಿದ್ದ ಅಶೋಕ್ ತಮ್ಮ ಬಣದವರು ಮೇಲುಗೈ ಸಾಧಿಸುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮೇಲೆ ಪಕ್ಷದಲ್ಲಿ ಯಡಿಯೂರಪ್ಪ ಹಿಡಿತ ಸಾಧಿಸುತ್ತಿದ್ದಾರೆ. ಬಿಬಿಎಂಪಿಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಯಶಸ್ವಿಯಾದರೆ ಅಶೋಕ್ ಪ್ರವರ್ಧಮಾನಕ್ಕೆ ಬರಬಹುದೆಂಬ ಕಾರಣಕ್ಕಾಗಿ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ವಿಧಾನ ಪರಿಷತ್‌ನಲ್ಲಿ ಹಾಲಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ ಇದೆ. ಇದರ ಸುಳಿವು ಅರಿತಿರುವ ಯಡಿಯೂರಪ್ಪ ಅವಿಶ್ವಾಸ ನಿರ್ಣಯದ ದಿನ ಜೆಡಿಎಸ್ ಬಹಿಷ್ಕಾರ ಅಥವಾ ಹೊರಗುಳಿಯಬಹುದೆಂಬ ಹಿನ್ನೆಲೆಯಲ್ಲಿ ಈ ತಂತ್ರ ಹೆಣೆದಿದ್ದಾರೆ. ಅವಿಶ್ವಾಸ ನಿರ್ಣಯದಲ್ಲಿ ತಮ್ಮ ಪಕ್ಷಕ್ಕೆ ಸೋಲುಂಟಾಗಿ ಮುಖಭಂಗವಾಗಬಹುದು. ಹೀಗಾಗಿ ಜೆಡಿಎಸ್ ಜೊತೆ ಕೈ ಜೋಡಿಸಿ ಮುಜುಗರಕ್ಕೀಡಾಗುವುದನ್ನು ತಪ್ಪಿಸಲು ದೂರ ಉಳಿಯಲು ಸೂಚನೆ ನೀಡಿದ್ದಾರೆ.
Comments are closed.