
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸುವವರು ಎಷ್ಟೇ ದೊಡ್ಡವರಾಗಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭಿನ್ನಮತೀಯರಿಗೆ ನೇರವಾಗಿ ಎಚ್ಚರಿಕೆ ಕೊಟ್ಟಿದ್ದಾರೆ.
ಪದಾಧಿಕಾರಿಗಳ ನೇಮಕಾತಿಯಲ್ಲಿ ಬಿಜೆಪಿ ಮೂಲಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಪ್ರತ್ಯೇಕ ಸಭೆ ನಡೆಸಿದ ಭಿನ್ನಮತೀಯರಿಗೆ ಯಡಿಯೂರಪ್ಪ ಈ ಮೂಲಕ ನೇರವಾಗಿ ಬಿಸಿಮುಟ್ಟಿಸಿದಂತಾಗಿದೆ.
ಪಕ್ಷದ ಕಚೇರಿಯಲ್ಲಿ ಇಂದು ನಡೆದ ಪದಾಧಿಕಾರಿಗಳ ಸಭೆಯಲ್ಲಿ ಉದ್ಘಾಟನಾ ಭಾಷಣ ಮಾಡಿದ ಅವರು, ಕೆಲವರು ಪಕ್ಷದೊಳಗೆ ಭಿನ್ನಮತ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ಗುಡುಗಿದರು. ಏನೇ ಸಮಸ್ಯೆಗಳಿದ್ದರೂ ಪಕ್ಷದ ಚೌಕಟ್ಟಿನೊಳಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಅದನ್ನು ಬಿಟ್ಟು ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿಕೆಗಳನ್ನು ನೀಡಿದರೆ ಶಿಸ್ತುಕ್ರಮ ಜರುಗಿಸುವುದು ಅನಿವಾರ್ಯ ಎಂದು ಹೇಳಿದರು. ಗೊಂದಲದ ಹೇಳಿಕೆಗಳನ್ನು ನೀಡದಂತೆ ತಡೆಗಟ್ಟಲು ಶಿಸ್ತು ಸಮಿತಿಯನ್ನು ರಚನೆ ಮಾಡಲಾಗುವುದು. ಕಾಂಗ್ರೆಸ್, ಜೆಡಿಎಸ್ ಕಚ್ಚಾಟದಲ್ಲಿ ತೊಡಗಿರುವ ನಾವೆಲ್ಲರೂ ಒಗ್ಗಟ್ಟಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಡ್ಡಾಯವಾಗಿ ಪಾಲ್ಗೊಳ್ಳಿ:
ಸೋಮವಾರದಿಂದ ಆರಂಭವಾಗುವ ವಿಧಾನಮಂಡಲದ ಉಭಯ ಸದನಗಳಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು, ಯiವುದೇ ಕಾರಣಕ್ಕೂ ಗೈರು ಹಾಜರಾಗಬಾರದು ಎಂದು ಬಿಎಸ್ವೈ ಸಲಹೆ ನೀಡಿದರು. ಜನರು ನಮ್ಮನ್ನು ಆಯ್ಕೆ ಮಾಡುವುದು ಅವರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಬೇಕೆಂಬ ಸದುದ್ದೇಶದಿಂದ. ಏನೇ ಕೆಲಸ-ಕಾರ್ಯಗಳು, ಒತ್ತಡವಿದ್ದರೂ ಅದನ್ನು ಬದಿಗೊತ್ತಿ ಕಲಾಪದಲ್ಲಿ ಪಾಲ್ಗೊಳ್ಳಬೇಕು. ಪ್ರತಿಪಕ್ಷದ ನಾಯಕರು ಪ್ರಸ್ತಾಪಿಸುವ ಪ್ರತಿಯೊಂದು ವಿಷಯಗಳಿಗೂ ಬೆನ್ನೆಲುಬಾಗಿ ನಿಲ್ಲಬೇಕೆಂದು ಸೂಚಿಸಿದರು.
ರಾಜ್ಯ ಸರ್ಕಾರ ಆಡಳಿತದಲ್ಲಿ ವಿಫಲವಾಗಿದೆ ಎಂಬುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಅಧಿಕಾರಿಗಳ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅವರ ಹೇಳಿಕೆಗಳನ್ನು ಕರಪತ್ರದ ಮೂಲಕ ರಾಜ್ಯದ ಜನತೆಗೆ ಪದಾಧಿಕಾರಿಗಳು ಹಂಚಬೇಕೆಂದು ಅವರು ತಿಳಿಸಿದರು. ಕೇಂದ್ರ ಸರ್ಕಾರ ರಾಜ್ಯಕ್ಕೆ ಅನೇಕ ಯೋಜನೆಗಳನ್ನು ಕೊಟ್ಟಿದೆ. ತುಮಕೂರು ಜಿಲ್ಲೆ ಪಾವಗಡದಲ್ಲಿ ವಿಶ್ವದಲ್ಲೇ ಅತಿ ದೊಡ್ಡದಾದ ಸೌರ ವಿದ್ಯುತ್ ಘಟಕ, ಆಹಾರ ಸಂಸ್ಕರಣಾ ಘಟಕ, ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೆ ಒಂದು ಲಕ್ಷ ಕೋಟಿ, ಧಾರವಾಡದಲ್ಲಿ ಐಐಟಿ ಸ್ಥಾಪನೆ, ಬೆಂಗಳೂರು-ಮೈಸೂರು ರಸ್ತೆಯಲ್ಲಿ ಆರು ಪಥದ ರಸ್ತೆ ನಿರ್ಮಾಣ, ಶಿರಾಡಿಘಾಟ್ ಸುರಂಗ ನಿರ್ಮಾಣಕ್ಕೆ 10 ಕೋಟಿ, ಬೆಂಗಳೂರಿಗೆ ಸಬರ್ಬನ್ ರೈಲ್ವೆ, ಸ್ಥಳೀಯ ಸಂಸ್ಥೆಗಳಿಗೆ ನೀಡುತ್ತಿರುವ ಅನುದಾನ ದುಪ್ಪಟ್ಟು ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದನ್ನು ಜನರಿಗೆ ಮನವರಿಕೆ ಮಾಡಿಕೊಡಿ ಎಂದು ಹೇಳಿದರು.
ಅಡಿಕೆ ಬೆಳೆಗಾರರ ಸಮಸ್ಯೆಯನ್ನು ಪರಿಹರಿಸುವಂತೆ ಸಚಿವೆ ನಿರ್ಮಲಾಸೀತಾರಾಮ್ಗೆ ಮನವಿ ಮಾಡಲಾಗಿದೆ. ಪ್ರತಿ ಕ್ವಿಂಟಾಲ್ಗೆ 40 ಸಾವಿರ ರೂ. ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ಒತ್ತಾಯಿಸಲಾಗಿದೆ. ಇನ್ನೊಂದು ವಾರದಲ್ಲಿ ಈ ಸಮಸ್ಯೆ ಪರಿಹರಿಸಲು ಜವಾಬ್ದಾರಿ ವಹಿಸಿಕೊಳ್ಳುವುದಾಗಿ ಯಡಿಯೂರಪ್ಪ ತಿಳಿಸಿದರು. ಇದಕ್ಕೂ ಮುನ್ನ ಪ್ರಾಸ್ತಾವಿಕ ಭಾಷಣ ಮಾಡಿದ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಎಲ್ಲ ರೀತಿಯ ಅವಕಾಶಗಳಿವೆ. ಕಾರ್ಯಕರ್ತರೆಲ್ಲ ಒಗ್ಗೂಡಿ ಅಧಿಕಾರಕ್ಕೆ ಬರಲು ಶ್ರಮವಹಿಸಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಹಾಗೂ ದುರಾಡಳಿತದಿಂದ ಬೇಸತ್ತು ಬಿಜೆಪಿಯನ್ನು ಅಧಿಕಾರಕ್ಕೆ ತರಲು ಜನತೆ ಎದುರು ನೋಡುತ್ತಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ನಾವು ನಡೆದುಕೊಂಡರೆ ಪಕ್ಷ ಅಧಿಕಾರಕ್ಕೆ ಬರುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದರು. ಬಲಿಷ್ಠವಾದ ನಾಯಕತ್ವ, ಶಕ್ತಿಶಾಲಿ ಸಂಘಟನೆ ನಮ್ಮೊಂದಿಗೆ ಇರುವಾಗ ರಣರಂಗಕ್ಕೆ ಇಳಿಯಲು ಅಡ್ಡಿಯೇನಿಲ್ಲ ಎಂದರು.
ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್, ಸಂಸದರಾದ ಪ್ರಹ್ಲಾದ್ ಜೋಷಿ, ಶೋಭಾಕರಂದ್ಲಾಜೆ, ಶ್ರೀರಾಮುಲು, ಮುಖಂಡರಾದ ಅರವಿಂದ ಲಿಂಬಾವಳಿ, ಆರ್.ಅಶೋಕ್, ಸಿ.ಟಿ.ರವಿ, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಸಂಸದರು, ಶಾಸಕರು, ಮುಖಂಡರು ಪಾಲ್ಗೊಂಡಿದ್ದರು.
Comments are closed.