ಬೆಂಗಳೂರು: ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರನ್ನು ರಕ್ಷಿಸಲು ನೀವು ಗೃಹ ಸಚಿವರಾಗಿದ್ದೀರಾ ಎಂದು ಹಾಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.
ಮೇಲ್ಮನೆಯಲ್ಲಿ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ಕೈವಾಡವಿದೆ ಎಂದು ರಾಜ್ಯಕ್ಕೆ ಗೊತ್ತಿದೆ. ಅವರನ್ನು ರಕ್ಷಿಸಲು ನೀವು ಗೃಹ ಸಚಿವರಾಗಿದ್ದೀರಾ ?ಎಂದು ಹಾಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಪ್ರಶ್ನಿಸಿದ್ದಾರೆ.
ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆ ಮುನ್ನ ಖಾಸಗಿ ವಾಹಿನಿಯಲ್ಲಿ ಹೇಳಿಕೆ ನೀಡಿರುವ ಆಧಾರದ ಮೇಲೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವಿಧವೆ ಮಹಿಳೆ ಕೋರ್ಟ್ ಮೊರೆ ಹೋಗಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ವಿಧವೆ ಮಹಿಳೆ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.
ರಾಜ್ಯ ಸರಕಾರ ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು ಚಿತ್ರ ಹಿಂಸೆ ನೀಡುತ್ತಿದೆ. ಗಣಪತಿ ಅವರು ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದರು. ಆದರೆ, ತನಿಖೆಯ ಹಾದಿ ತಪ್ಪಿಸಲು ಡೆತ್‌ನೋಟ್‌ನ್ನು ಹರಿದು ಎಸೆಯಲಾಗಿದೆ ಎಂದು ಸರಕಾರದ ವಿರುದ್ಧ ಆರೋಪ ಮಾಡಿದ್ದಾರೆ.
ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವವರೆಗೂ ಮತ್ತು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
Comments are closed.