
ನವದೆಹಲಿ: ಮಂಗಳೂರು ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ಕರ್ನಾಟಕದ ಬಿಜೆಪಿ ಸಂಸದರು ಸಂಸತ್ ಭವನದ ಮುಂದೆ ಇಂದು ಪ್ರತಿಭಟನೆ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ಸಂಸದರು ಭಾಗವಹಿಸಿದ್ದರು.
ಈ ಪ್ರಕರಣದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಿದ್ದಾರೆ. ಆದರೆ, ಇದು ಸಾಲದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಂಸದರು ಒತ್ತಾಯಿಸಿದರು.
ಸಿಬಿಐ ತನಿಖೆಗೆ ಒಪ್ಪಿಸಲು ಹಿಂದೇಟು ಹಾಕುತ್ತಿರುವ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ತೀವ್ರವಾಗಿ ಖಂಡಿಸಲಾಯಿತು.
ಪ್ರಕರಣವನ್ನು ಸರ್ಕಾರ ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿದೆಯಾದರೂ, ನ್ಯಾಯ ದೊರಕುವ ನಂಬಿಕೆಯಿಲ್ಲ. ಸಿಬಿಐ ತನಿಖೆಗೆ ಒಪ್ಪಿಸಿದರೆ ಮಾತ್ರವೇ ಸತ್ಯಾಂಶ ಹೊರಬರಲು ಸಾಧ್ಯ ಎಂದು ಯಡಿಯೂರಪ್ಪ ಒತ್ತಾಯಿಸಿದರು.
ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಲಾಗಿದೆ. ಮತ್ತೊಮ್ಮೆ ಅವರನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಡಲಾಗುವುದು ಎಂದು ಅವರು ಹೇಳಿದರು.
ಕಳೆದ ಒಂದು ವಾರದಿಂದ ವಿಧಾನ ಮಂಡಲದ ಉಭಯ ಸದನಗಳಲ್ಲಿ ಬಿಜೆಪಿ ಸದಸ್ಯರು ಸಚಿವ ಜಾರ್ಜ್ ರಾಜೀನಾಮೆಗೆ ಆಗ್ರಹಿಸಿದ್ದರಲ್ಲದೆ, ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು, ಕಾರ್ಯಕಲಾಪಗಳಿಗೆ ಅಡ್ಡಿಪಡಿಸಿದ್ದರು.
ಸಚಿವ ಜಾರ್ಜ್ ಬೆಂಬಲಕ್ಕೆ ನಿಂತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು, ಸಚಿವರ ರಾಜೀನಾಮೆ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದ್ದರು.
ಮಡಿಕೇರಿಯ ಜೆಎಂಎಫ್‌ಸಿ ನ್ಯಾಯಾಲಯ ಜಾರ್ಜ್ ಹಾಗೂ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆದೇಶ ಹೊರಡಿಸಿದ ನಂತರ ಜಾರ್ಜ್ ರಾಜೀನಾಮೆ ನೀಡಿದ್ದರು.
Comments are closed.