
ಮಂಡ್ಯ: ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿರುವುದನ್ನು ಖಂಡಿಸಿ ಮಂಡ್ಯ ಜೆಡಿಎಸ್ ಸಂಸದ ಸಿ.ಎಸ್.ಪುಟ್ಟರಾಜು ಅವರು ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಮಂಗಳವಾರ ಘೋಷಿಸಿದ್ದಾರೆ.
ಈ ಸಂಬಂಧ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪುಟ್ಟರಾಜು, ಸುಪ್ರೀಂ ಕೋರ್ಟ್ ರಾಜ್ಯದ ರೈತರ ಗಾಯದ ಮೇಲೆ ಬರೆ ಎಳೆದಿದೆ. ಇಂತಹ ಸಂದರ್ಭದಲ್ಲಿ ನಾನು ಸಂಸದನಾಗಿ ಮುಂದುವರೆಯುವುದಿಲ್ಲ ಎಂದರು.
ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕಿತ್ತು. ಆದರೆ ಕಾವೇರಿ ಹಾಗೂ ಮಹಾದಾಯಿ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ಇದನ್ನು ಖಂಡಿಸಿ ನಾನು ಮಂಡ್ಯ ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ಅವರ ಮೂಲಕ ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ. ನಂತರ ದೆಹಲಿಗೆ ತೆರಳಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಇನ್ನು ಸುಪ್ರೀಂ ಕೋರ್ಟ್ ಆದೇಶವನ್ನು ಹಲವು ಜನಪ್ರತಿನಿಧಿಗಳು ಖಂಡಿಸಿದ್ದು, ಮಂಡ್ಯ ಜಿಲ್ಲೆ ಮದ್ದೂರು ಶಾಸಕ ಡಿಸಿ ತಮ್ಮ ಹಾಗೂ ಜೆಡಿಎಸ ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ನಾಡಗೌಡ ಅವರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡುವುದಾಗಿ ಹೇಳಿದ್ದಾರೆ.
ಶಾಸಕರು ರಾಜೀನಾಮೆ ಘೋಷಣೆ: ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ, ಕೆ.ಆರ್.ಪೇಟೆ ಶಾಸಕ ಕೆ.ಸಿ.ನಾರಾಯಣಗೌಡ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ, ವಿಧಾನ ಪರಿಷತ್ ಸದಸ್ಯ ಎನ್.ಅಪ್ಪಾಜಿಗೌಡ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಸೆ. 22ರಂದು ಮಂಡ್ಯ ಶಾಸಕ ಅಂಬರೀಷ್ ಅವರು ಸ್ಪೀಕರ್ಗೆ ರಾಜೀನಾಮೆ ನೀಡಲಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.
ಭಿನ್ನರೂ ಸಿದ್ಧ: ಹಿತರಕ್ಷಣಾ ಸಮಿತಿಯ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ. ಸಮಿತಿ ರಾಜೀನಾಮೆಗೆ ಸೂಚಿಸಿದರೆ ಅದಕ್ಕೂ ಸಿದ್ಧ ಎಂದು ಜೆಡಿಎಸ್ ಭಿನ್ನಮತೀಯ ಶಾಸಕರಾದ ಎನ್.ಚಲುವರಾಯಸ್ವಾಮಿ, ರಮೇಶ ಬಂಡಿಸಿದ್ದೇಗೌಡ ಸ್ಪಷ್ಟಪಡಿಸಿದರು.
‘ಸಂವಿಧಾನಿಕ ಬಿಕ್ಕಟ್ಟು ಸೃಷ್ಟಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸೇರಿದಂತೆ ಎಲ್ಲರೂ ರಾಜೀನಾಮೆ ನೀಡಬೇಕು. ಆಗ ಮಾತ್ರ ನಮಗೆ ನ್ಯಾಯ ಸಿಗಲಿದೆ’ ಎಂದು ಶಾಸಕ ಚಲುವರಾಯಸ್ವಾಮಿ ಹೇಳಿದರು.
ಜಿಲ್ಲೆಯ ಜನರ ಸಂಕಷ್ಟದೊಡನೆ ಸದಾ ಇರುತ್ತೇನೆ. ಅವರಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು
Comments are closed.