ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಅಂತಿಮ ನಗಾರಿ ಭಾರಿಸಿದ್ದೇವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಪಕ್ಷ ಹಮ್ಮಿಕೊಂಡಿದ್ದ ಹಿಂದುಳಿದ ವರ್ಗಗಳ ಬೃಹತ್ ಏಕತಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಿಂದ ಜನ ರೋಸಿ ಹೋಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಅತೀ ಭ್ರಷ್ಟ ಸರ್ಕಾರ ಎಂಬ ಕುಖ್ಯಾತಿ ಪಡೆದಿದ್ದು, ಸಿದ್ದರಾಮಯ್ಯ ಅವರ ಸರ್ಕಾರವನ್ನು ಕಿತ್ತೊಗೆಯುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ರಾಜ್ಯಧ್ಯಕ್ಷ ಹಾಗೂ ಸಂಸದ ಬಿಎಸ್ ಯಡಿಯೂರಪ್ಪ ಅವರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ ಅವರು, ರಾಜ್ಯದ ಅಭಿವೃದ್ಧಿಯಲ್ಲಿ ಬಿಜೆಪಿ ಪಕ್ಷದ ಪಾತ್ರ ಪ್ರಮುಖವಾಗಿದೆ. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರಲಿದೆ. ಸಿದ್ದರಾಮಯ್ಯ ಅವರ ಭ್ರಷ್ಟ ಸರ್ಕಾರವನ್ನು ಕಿತ್ತೊಗೆದು ಬಿಜೆಪಿಯನ್ನು ಅಧಿಕಾರಕ್ಕೆ ತಂದು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ. ಕೇಂದ್ರ ಸರ್ಕಾರ ಎಲ್ಲಾ ವರ್ಗದ ಜನರಿಗೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಹಿಂದುಳಿದ ವರ್ಗದ ಜನರಿಗಾಗಿಯೇ ಕೇಂದ್ರ ಸರ್ಕಾರ 54 ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅವುಗಳನ್ನು ನಿಮಗೆ ತಲುಪಿಸಲು ರಾಜ್ಯದ ಸಿದ್ದರಾಮಯ್ಯ ಸರ್ಕಾರ ಅಡ್ಡಿಯಾಗಿದೆ. ಸಿದ್ದರಾಮಯ್ಯ ಅವರ ಜನವಿರೋಧಿ ಆಡಳಿತದಿಂದ ಜನ ರೋಸಿ ಹೋಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ತಕ್ಕಶಾಸ್ತಿ ಮಾಡಲಿದ್ದಾರೆ ಎಂದು ಅವರು ಹೇಳಿದರು.
ಬಿಹಾರ ಸಿಎಂ ನಿತೀಶ್ ಕುಮಾರ್ಗೆ ಶಾ ಅಭಿನಂದನೆ
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ನೋಟು ನಿಷೇಧ ಕ್ರಮಕ್ಕೆ ಬೆಂಬಲ ನೀಡಿದ ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಅಮಿತ್ ಶಾ ಧನ್ಯವಾದ ಹೇಳಿದರು. ನೋಟು ನಿಷೇಧ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿರುವ ಜೆಡಿಯು ವರಿಷ್ಠ ನಿತೀಶ್ ಕುಮಾರ್ ಅವರಿಗೆ ಧನ್ಯವಾದಗಳು ಎಂದು ಶಾ ಹೇಳಿದರು.
ಇನ್ನು ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್, ಡಿವಿ ಸದಾನಂದಗೌಡ, ಸಿಟಿ ರವಿ ಸೇರಿದಂತೆ ರಾಜ್ಯ ಬಿಜೆಪಿಯ ಎಲ್ಲ ಹಿರಿಯ ನಾಯಕರು ಪಾಲ್ಗೊಂಡಿದ್ದರು.
ಕರ್ನಾಟಕ
Comments are closed.