
ಮಂಗಳೂರು, ಡಿಸೆಂಬರ್ 29: ಜನವರಿ 9ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ‘ಜನತಾದಳದ ನಡಿಗೆ ಸೌಹಾರ್ದದ ಕಡೆಗೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರ ಸ್ವಾಮಿ ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ದ.ಕ.ದಲ್ಲಿ ನಡೆಯುತ್ತಿರುವ ದುಷ್ಕೃತ್ಯಗಳು ಕೋಮು ಬಣ್ಣ ಪಡೆದುಕೊಳ್ಳುತ್ತಿರುವುದರಿಂದ ಜಿಲ್ಲೆಯಲ್ಲಿ ಅದರಲ್ಲೂ ಮಂಗಳೂರಿನಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷದ ಹಿಡನ್ ಅಜೆಂಡಾ ಬಗ್ಗೆ ಕರಾವಳಿಯ ಜನರಿಗೆ ಎಚ್ಚರಿಕೆ ನೀಡುವ ಮೂಲಕ ಸಾಮರಸ್ಯ ನಿರ್ಮಿಸುವ ಉದ್ದೇಶದೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಸೌಹಾರ್ದ ವಾತಾವರಣ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ‘ಜನತಾದಳದ ನಡಿಗೆ ಸೌಹಾರ್ದದ ಕಡೆಗೆ’ ಸಮಾವೇಶದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಭಾಗವಹಿಸಲಿದ್ದಾರೆ. ಸಮಾವೇಶಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದ ಅವರು, ಸಮಾಜಘಾತುಕ ಶಕ್ತಿಗಳು, ಹಿಡನ್ ಅಜೆಂಡಾವನ್ನು ಹೊಂದಿರುವ ಸಂಘಟನೆಗಳ ಬೆಂಬಲ ಈ ಸಮಾವೇಶಕ್ಕೆ ಬೇಡ ಎಂದು ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ…
ರಾಜ್ಯದಲ್ಲಿ ಜನರು ಬದಲಾಯವಣೆಯನ್ನು ಬಯಸಿರುವುದರಿಂದ ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ . ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ 25 ಸಾವಿರ ಕೋಟಿ ರೂ. ವೆಚ್ಚದಲ್ಲಿ ಸ್ವಾಮಿನಾಥನ್ ಆಯೋಗದ ವರದಿ ಜಾರಿ ತರಲಾಗುವುದು. ಪ್ರತಿ ಕುಟುಂಬಕ್ಕೆ ಆರೋಗ್ಯ ವಿಮೆ ಸೌಕರ್ಯ ಸಹಿತ ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 5 ಸಾವಿರ ರೂ. ಗೌರವಧನ, ತಾಯಿ ಮಗುವಿನ ಆರೋಗ್ಯಕ್ಕಾಗಿ ತಲಾ 36 ಸಾವಿರ ವೆಚ್ಚ ಮಾಡಲು ಯೋಜನೆ ಹೊಂದಿರುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.
Comments are closed.