ರಾಷ್ಟ್ರೀಯ

ಏರ್​ಸೆಲ್​-ಮ್ಯಾಕ್ಸಿಸ್​ ಹಗರಣ: ಚಿದಂಬರಂಗೆ ಬಂಧನದಿಂದ ತಾತ್ಕಾಲಿಕ ತಡೆ!

Pinterest LinkedIn Tumblr


ನವದೆಹಲಿ: ಏರ್​ಸೆಲ್​-ಮ್ಯಾಕ್ಸಿಸ್​ ಹಗರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ತಾತ್ಕಾಲಿಕ ಪರಿಹಾರ ಸಿಕ್ಕಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದ್ದ ಹಿನ್ನೆಲೆಯಲ್ಲಿ ಚಿದಂಬರಂ ಅವರು ಜಾಮೀನು ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ ಮುಂದಿನ ವಿಚಾರಣೆವರೆಗೆ, ಅಂದರೆ, ಜೂನ್​ 5ರ ವರೆಗೆ ಬಂಧಿಸದಂತೆ ಮಧ್ಯಂತರ ಆದೇಶ ನೀಡಿದೆ.

ಜೂನ್​ 5ರಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರು ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗಬೇಕಿದೆ.

ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ಪಿ. ಚಿದಂಬರಂ ಅವರ ಪರವಾಗಿ ವಾದಿಸಲು ಹಿರಿಯ ವಕೀಲ ಮತ್ತು ಕಾಂಗ್ರೆಸ್​ ನಾಯಕ ಕಪಿಲ್​ ಸಿಬಲ್​ ಅವರು ಸಿಬಿಐ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಏರ್​ಸೆಲ್​-ಮ್ಯಾಕ್ಸಿಸ್​ ಒಪ್ಪಂದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿವೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಫೆಬ್ರವರಿಯಲ್ಲಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಬಂಧಿಸಲಾಗಿತ್ತು.

Comments are closed.