ಕರಾವಳಿ

ಡಿ.ಕೆ. ಶಿವಕುಮಾರ್‌ಗೆ ಅನಗತ್ಯ ಕಿರುಕುಳ ಆರೋಪ :ಕೇಂದ್ರ ಸರಕಾರದ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

Pinterest LinkedIn Tumblr

ಮಂಗಳೂರು: ಇ.ಡಿ ಇಲಾಖೆ ಹಾಗೂ ಆದಾಯ ತೆರಿಗೆ ಇಲಾಖೆ ಕೇಂದ್ರ ಸರಕಾರದ ಕೈಗೊಂಬೆಯಾಗಿ ವರ್ತಿಸಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ಗೆ ಅನಗತ್ಯ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಕೇಂದ್ರ ಸರಕಾರದ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮಾತನಾಡಿ, ಕೇಂದ್ರ ಸರಕಾರದ ಕೈಗೊಂಬೆಯಾಗಿ ವರ್ತಿಸಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಅನಗತ್ಯ ಕಿರುಕುಳ ನೀಡುವ ಮೂಲಕ ಕೇಂದ್ರ ಸರ್ಕಾರವು ಇ.ಡಿ ಇಲಾಖೆ ಹಾಗೂ ಆದಾಯ ತೆರಿಗೆ ಇಲಾಖೆ ಮೂಲಕ ಷಡ್ಯಂತ್ರ ಮತ್ತು ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರಕಾರ ಸ್ವತಂತ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರ ಬಂಧನಕ್ಕೆ ಷಡ್ಯಂತ್ರ ರಚಿಸುತ್ತಿದೆ. ಡಿಕೆ ಶಿವಕುಮಾರ್ ಅವರನ್ನು ರಾಜಕೀಯ ಪ್ರಭಾವ ಬಳಸಿ ಹಿಂಸೆ ನೀಡಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್ ನಾಯಕರನ್ನು ಈ ರೀತಿಯಾಗಿ ಹಿಂಸಿಸುವ ಕೆಲಸ ನಡೆದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾನಿರತರು ಕೇಂದ್ರ ಸರಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ರಸ್ತೆ ತಡೆಗೆ ಮುಂದಾದಾಗ ಸ್ಥಳದಲ್ಲಿದ್ದ ಪೊಲೀಸರು ಮಿಥುನ್ ರೈ ಸೇರಿದಂತೆ ನಾಯಕರನ್ನು ವಶಕ್ಕೆ ಪಡೆದು, ಬಳಿಕ ಬಿಡುಗಡೆಗೊಳಿಸಿದರು.

Comments are closed.