ಮಂಗಳೂರು, ಡಿಸೆಂಬರ್.20: ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಗುರುವಾರ ನಗರದಲ್ಲಿ ನಡೆದ ಪ್ರತಿಭಟನೆ ಹಾಗೂ ನಿಷೇಧಾಜ್ಞೆ ಉಲ್ಲಂಘಿಸಿ ಜಮಾಯಿಸಿದ ಗುಂಪೊಂದರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ ಬಳಿಕ ಸಂಜೆ ಠಾಣೆಗೆ ಬೆಂಕಿ ಹಚ್ಚಲು ಬಂದ ಗುಂಪುಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಈ ಸಂದರ್ಭ ಇಬ್ಬರು ಮೃತಪಟ್ಟ ಘಟನೆ ನಡೆದಿದ್ದು, ಈ ಎಲ್ಲಾ ಪ್ರಕರಣಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಕೋಮು ಪ್ರಚೋದಕ ಸಂದೇಶಗಳು ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿ.19ರ ರಾತ್ರಿ 10 ಗಂಟೆಯಿಂದ 48 ಗಂಟೆಗಳ ಕಾಲ ಮೊಬೈಲ್ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗುವುದು ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.
ಎಸ್ಕೆಎಸ್ಸೆಸ್ಸೆಫ್ ಸಂಘಟನೆಯು ಗುರುವಾರ ಮಧ್ಯಾಹ್ನ ಜಿಲ್ಲಾಧಿಕಾರಿಯ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು. ಈ ಮಧ್ಯೆ ಸೆ.144 ವಿಧಿಸಿದ ಹಿನ್ನಲೆಯಲ್ಲಿ ಸಂಘಟನೆ ಪ್ರತಿಭಟನೆಯನ್ನು ಮುಂದೂಡಿತ್ತು. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ಸಂದೇಶ ಆಧರಿಸಿ ಕೆಲವವರು ದ.ಕ. ಜಿಲ್ಲಾಧಿಕಾರಿ ಕಚೇರಿಯೆದುರು ಜಮಾಯಿಸಿದ್ದರು. ಪೊಲೀಸರು ಕೂಡಾ ಸಾಕಷ್ಡು ಸಂಖ್ಯೆಯಲ್ಲಿ ಬಂದೋಬಸ್ತ್ ಕಲ್ಪಿಸಿದ್ದರು. ಆದರೂ ಸ್ಟೇಟ್ ಬ್ಯಾಂಕ್ ಬಳಿಯ ಸಿಟಿ ಬಸ್ ನಿಲ್ದಾಣದ ಸಮೀಪ ಯುವಕರು ಘೋಷಣೆ ಕೂಗತೊಡಗಿದರು.
ಪ್ರತಿಭಟನೆ ತೀವ್ರರೂಪ ಪಡೆಯುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಲಾಠಿಚಾರ್ಜ್ ಬೆನ್ನಲ್ಲೇ ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸ್ ವಾಹನದತ್ತಲೂ ಕಲ್ಲು ತೂರಾಟ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದಾರೆ.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಬಳಿ ಬಸ್ ಸಂಚಾರ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯಿಂದ ಆತಂಕಗೊಂಡಿರುವ ಪರಿಸರದ ಅಂಗಡಿಮುಂಗಟ್ಟುಗಳ ಮಾಲಕರು ಸ್ವಯಂಪ್ರೇರಿತವಾಗಿ ಅಂಗಡಿಮುಂಗಟ್ಟುಗಳಿಗೆ ಬೀಗ ಜಡಿದ ಘಟನೆ ನಡೆದಿತ್ತು.

Comments are closed.