
ಕೊಡಗು: ಸಿಎಎ ವಿರೋಧಿ ಪ್ರತಿಭಟನಾ ಸಭೆಯಲ್ಲಿ ಪಾಕ್ ಪರ ಜಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯ ಲಿಯೋನ್ ವಿರುದ್ಧ ಜಿಲ್ಲೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜಿಲ್ಲೆಯ ವಿವಿಧೆಡೆ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ಅಮೂಲ್ಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿವೆ.
ನಾಪೋಕ್ಲು ಬಸ್ ನಿಲ್ದಾಣ ಹಾಗೂ ಮಡಿಕೇರಿ ತಿಮ್ಮಯ್ಯ ವೃತ್ತದಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಅಮೂಲ್ಯ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿವೆ. ವಂದೇ ಮಾತರಂ ಘೋಷಣೆ ಕೂಗುವ ಮೂಲಕ ಯುವತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಮೂಲ್ಯ ವರ್ತನೆಗೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದ್ದು, ವಿವಿಧೆಡೆ ಪ್ರತಿಭಟನೆ ನಡೆಸುತ್ತಿವೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಿವಪುರದಲ್ಲಿರುವ ಅಮೂಲ್ಯ ಲಿಯೋನ್ ನಿವಾಸದ ಮೇಲೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರು. ಅಮೂಲ್ಯ ಹೇಳಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ್ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದರು. ಈ ಕಾರ್ಯಕ್ರಮದಲ್ಲಿ ಹೈದರಾಬಾದ್‌ನ ಎಐಎಂಇಎಂ ಸಂಸದ ಅಸಾದುದ್ದೀನ್ ಒವೈಸಿ ಕೂಡ ಭಾಗವಹಿಸಿದ್ದರು. ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Comments are closed.