ಕರ್ನಾಟಕ

ಯುವಕ ಚುಡಾಯಿಸಿದ್ದಕ್ಕೆ ಮಹಿಳೆ ಆತ್ಮಹತ್ಯೆ..!

Pinterest LinkedIn Tumblr


ನಂಜನಗೂಡು (ಮೈಸೂರು): ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಕಿ ಹಚ್ಚಿಕೊಂಡಿದ್ದ ಗೃಹಿಣಿಯನ್ನು ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಲ್ಲಹಳ್ಳಿ ಗ್ರಾಮದ ನಿವಾಸಿ ಚಿನ್ನಸ್ವಾಮಿ ಎಂಬುವರ ಪತ್ನಿ 30 ವರ್ಷದ ಜಯಶ್ರೀ ಮೃತರು. ನೆರೆ ಮನೆಯ ಯುವಕ ಚುಡಾಯಿಸಿದ್ದರಿಂದ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮೃತಳ ಪತಿ ನಂಜನಗೂಡು ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್‌ ಎಂಬಾತ ಮೃತಳನ್ನು ಆಗಾಗ್ಗೆ ಚುಡಾಯಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಮನನೊಂದ ಜಯಶ್ರೀ ಆಗಸ್ಟ್ 18ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ನೆರೆಹೊರೆಯವರು ಆಕೆಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಿದ್ದರು.

ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಗೃಹಿಣಿಗೆ ಚುಡಾಯಿಸುತ್ತಿದ್ದ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.