ಕರ್ನಾಟಕ

ಕೆಎಎಸ್ ಅಧಿಕಾರಿ ಡಾ. ಸುಧಾ ಮನೆ, ಕಚೇರಿ ಸೇರಿದಂತೆ 6 ಕಡೆ ಎಸಿಬಿ ಅಧಿಕಾರಿಗಳಿಂದ ದಾಳಿ; ಚಿನ್ನಾಭರಣ, ಲಕ್ಷಾಂತರ ನಗದು ಪತ್ತೆ

Pinterest LinkedIn Tumblr

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಡಾ. ಸುಧಾ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು, ಉಡುಪಿಯ ಹೆಬ್ರಿ, ಮೈಸೂರಿನಲ್ಲಿರುವ ಡಾ. ಸುಧಾ ಅವರ ಮನೆ ಮತ್ತು ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಲಾಗಿದ್ದು, ಈ ವೇಳೆ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನಾಭರಣ, ಸುಮಾರು ಹತ್ತು ಲಕ್ಷ ನಗದು, ಹಲವು ಆಸ್ತಿ ಪತ್ರಗಳು ಪತ್ತೆಯಾಗಿವೆ ಎನ್ನಲಾಗಿದೆ.

ಬೆಂಗಳೂರಿನ ಕೊಡಿಗೇಹಳ್ಳಿಯ ಭವ್ಯ ಬಂಗಲೆಯಲ್ಲಿ ವಾಸವಾಗಿರುವ ಸುಧಾ ಬಳಿ ಕೆಜಿ ಗಟ್ಟಲೆ ಚಿನ್ನಾಭರಣ ಹಾಗೂ ಸುಮಾರು 10 ಲಕ್ಷ ನಗದು ಸಿಕ್ಕಿದೆ. ಸತತ 5 ಗಂಟೆಯಿಂದ ಸುಧಾ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಸುಧಾ ಅವರ ಬೆಂಗಳೂರಿನ ಮನೆ, ಕಚೇರಿ ಸೇರಿದಂತೆ 6 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೊತೆಗೆ ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ತೆಂಕಬಟ್ಟಿನ ಮನೆ ಮೇಲೂ ದಾಳಿ ನಡೆಸಲಾಗಿದೆ. ಈ ಹಿಂದೆ ಬಿಡಿಎನಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಡಾ. ಬಿ. ಸುಧಾ ಅವರ ವಿರುದ್ಧ ಎಸಿಬಿಯಲ್ಲಿ ಅಕ್ರಮ ಆಸ್ತಿ ಗಳಿಕೆ ಹಾಗೂ ಅವ್ಯವಹಾರದ ಕುರಿತಾಗಿ ದೂರು ದಾಖಲಾಗಿತ್ತು. ಸುಧಾ ಪ್ರಸ್ತುತ ಜೈವಿಕ ತಂತ್ರಜ್ಞಾನ ಇಲಾಖೆಯಲ್ಲಿ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೇಳೆ ಡಾ. ಸುಧಾ ಭೂ ಪರಿಹಾರ ನೀಡುವ ವಿಚಾರದಲ್ಲಿ ತಮ್ಮ ಗಂಡ ಮತ್ತು ದಲ್ಲಾಳಿಗಳ ಮೂಲಕ ಲಂಚ ಪಡೆಯುತ್ತಿದ್ದರು. ಅಲ್ಲದೆ ತಮ್ಮ ಸಂಬಳಕ್ಕಿಂತಲೂ ಆದಾಯದ ಮೊತ್ತ ಜಾಸ್ತಿ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಎಸಿಬಿಗೆ ಆದೇಶಿಸಲಾಗಿತ್ತು.

Comments are closed.