ಕರ್ನಾಟಕ

ಮಾಜಿ ಸಚಿವ, ಸಿಂದಗಿ ಕ್ಷೇತ್ರದ ಜೆಡಿಎಸ್ ಹಾಲಿ ಶಾಸಕ ಎಂ.ಸಿ. ಮನಗೂಳಿ ನಿಧನ

Pinterest LinkedIn Tumblr

ಬೆಂಗಳೂರು: ಮಾಜಿ ಸಚಿವ, ವಿಜಯಪುರ ಸಿಂದಗಿ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಹಾಲಿ ಶಾಸಕ ಎಂ.ಸಿ. ಮನಗೂಳಿ ಅವರು ಗುರುವಾರ ರಾತ್ರಿ ನಿಧನರಾದರು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ 85 ವರ್ಷದ ಮನಗೂಳಿ ಅವರನ್ನು ಜನವರಿ 9ರಂದು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ರಾತ್ರಿ 1 ಗಂಟೆಗೆ ಅವರು ಕೊನೆಯುಸಿರೆಳೆದರು.

ತೀವ್ರ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಕಲಬುರ್ಗಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಕರೆತರಲಾಗಿತ್ತು. 1936ರ ಸೆಪ್ಟೆಂಬರ್ 29ರಂದು ಬಾಗೇವಾಡಿ ತಾಲ್ಲೂಕಿನ ಮನಗೂಳಿಯಲ್ಲಿ ಜನಿಸಿದ್ದ ಅವರ ಪೂರ್ಣ ಹೆಸರು ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ.

ಎಸ್.ಎಸ್.ಎಲ್.ಸಿ. ವಿದ್ಯಾಭ್ಯಾಸ ಮಾಡಿರುವ ಎಂಸಿ ಮನಗೂಳಿ ಅವರು ಸಿಂದಗಿ ಕ್ಷೇತ್ರದಿಂದ ಏಳು ಬಾರಿ ಸ್ಪರ್ಧಿಸಿದ್ದರು. ಎರಡು ಬಾರಿ ಶಾಸಕರಾಗಿದ್ದರು. 1994ರಲ್ಲಿ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಎಚ್‌ಡಿ ದೇವೇಗೌಡ ಅವರ ಸರ್ಕಾರದಲ್ಲಿ 12 ತಿಂಗಳು ಪಂಚಾಯತ್ ರಾಜ್ ಸಚಿವರಾಗಿ ಮತ್ತು 2018ರ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ತೋಟಗಾರಿಕೆ ಸಚಿವರಾಗಿದ್ದರು. ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದರು.

ಇಂದು ಮಧ್ಯಾಹ್ನ ಅವರ ಪಾರ್ಥಿವ ಶರೀರವನ್ನು ಸಿಂಧಗಿಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಆದರೆ, ಅಂತ್ಯಸಂಸ್ಕಾರ ಯಾವಾಗ ನಡೆಸಬೇಕೆಂದು ಇನ್ನೂ ನಿರ್ಧಾರವಾಗಿಲ್ಲ. ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಅಂತ್ಯಸಂಸ್ಕಾರ ನಡೆಯಲಿದೆ ಎನ್ನಲಾಗಿದೆ.

Comments are closed.