ಕರಾವಳಿ

ಮಹಿಳೆಯರು ಕೇವಲ ಮನೆಕೆಲಸಕ್ಕೆ ಸೀಮಿತವಾಗದೆ ಶಿಕ್ಷಣವಂತರಾಗಿ ಸಮಾಜದ ವೈಶಿಷ್ಟ್ಯಪೂರ್ಣ ಬದಲಾವಣೆಗೆ ಮುಂದಾಗಬೇಕು: ಡಿ.ಸಿ

Pinterest LinkedIn Tumblr

ಮಂಗಳೂರು, ಮಾರ್ಚ್ 09 : ಮಹಿಳೆಯರು ಕೇವಲ ಮನೆಕೆಲಸಕ್ಕೆ ಸೀಮಿತವಾಗದೆ ಉತ್ತಮ ಶಿಕ್ಷಣವಂತರಾಗಿ ಆರ್ಥಿಕವಾಗಿ ಸಬಲರಾಗುವುದರೊಂದಿಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಿ ಸಮಾಜದ ವೈಶಿಷ್ಟ್ಯಪೂರ್ಣ ಬದಲಾವಣೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ತಿಳಿಸಿದರು.

ಅವರು ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವಕೇಂದ್ರ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹಿಳೆಯರು ಇತ್ತೀಚಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿರುವುದು ಕಂಡುಬರುತ್ತಿದೆ, ಆದರೂ ಅವರಿಗೆ ಇನ್ನೂ ಹೆಚ್ಚಿನ ಅವಕಾಶಗಳನ್ನು ಮಾಡಿಕೊಡುವುದು ಪ್ರತಿಯೊಬ್ಬರ ಜವಬ್ದಾರಿಯಾಗಿದೆ ಎಂದರು

ಗ್ರಾಮೀಣ ಮಹಿಳೆಯರ ವೈಯಕ್ತಿಕ ಸ್ವಚ್ಚತೆ ಮತ್ತು ಆರೋಗ್ಯಾಭಿüವೃದ್ಧಿಗೆ ಸಂಬಂಧಿಸಿದಂತೆ ಆಯಾ ತಾಲೂಕಿನ ಆರೋಗ್ಯ ಮತ್ತು ಕುಟುಂಬ ಇಲಾಖೆಗಳು ಅಗತ್ಯ ಮಾಹಿತಿಗಳನ್ನು ನೀಡಬೇಕು. ಜೊತೆಗೆ ಅರಿವು ಕಾರ್ಯಕ್ರಮಗಳು ಮತ್ತು ವಿಚಾರ ಸಂಕಿರಣಗಳನ್ನು ಕೈಗೊಂಡು ಮಹಿಳೆಯರಿಗೆ ಅಗತ್ಯವಿರುವ ಮೂಲಸೌಕರ್ಯವನ್ನು ಒದಗಿಸಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ಮಹಿಳೆಯರು ಹೆಚ್ಚಾಗಿ ತುತ್ತಾಗುತ್ತಿದ್ದು, ಕಾಯಿಲೆಗಳಿಗೆ ಸಂಬಂಧಿಸಿದ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅರಿವು ಮೂಡಿಸುವ ಕಾರ್ಯವನ್ನು ಆರೋಗ್ಯ ಇಲಾಖೆಗಳು ಮಾಡಬೇಕು ಎಂದರು.

ಮಹಿಳೆಯರು ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಲೈಂಗಿಕ ದೌರ್ಜನ್ಯಗಳು ಹಾಗೂ ಲೈಂಗಿಕ ಕಿರುಕುಳಗಳು ಉಂಟು ಮಾಡುವ ಸಾಧ್ಯತೆ ಇರುತ್ತದೆ. ಇದನ್ನು ತಡೆಗಟ್ಟಲು ಜಿಲ್ಲಾ ದೂರು ಸಮಿತಿಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ದೇಶದಲ್ಲಿ ಮಹಿಳೆಯರು ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಜವಬ್ದಾರಿಯುತ ಕಾರ್ಯವನ್ನು ನಿರ್ವಹಿಸುತ್ತಿದ್ದು, ಪುರುಷರಿಗಿಂತ ಮಹಿಳೆಯರು ಸದೃಢರಾಗಿ ದೇಶಕ್ಕೆ ಹಲವಾರು ಕೊಡುಗೆಗಳನ್ನು ನೀಡುವಂತಾಗಲಿ ಎಂದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ಒಂದು ಕುಟುಂಬ ಗಟ್ಟಿಯಾಗಿ, ವ್ಯವಸ್ಥಿತವಾಗಿ ನೆಲೆಯೂರಬೇಕಾದರೆ ಮಹಿಳೆ ಬಹು ಮುಖ್ಯವಾಗಿದ್ದಾಳೆ. ಮಹಿಳೆಯರು ಪ್ರತಿ ಕ್ಷೇತ್ರದಲ್ಲೂ ಸಾಧನೆ ಮಾಡುವುದರೊಂದಿಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಸದೃಢರಾಗಬೇಕು ಎಂದರು.

ಸರ್ಕಾರದ ಸವಲತ್ತುಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು ಸಮಾಜದ ಸುಧಾರಣೆ ಮಾಡುವಲ್ಲಿ ಮಹಿಳೆಯ ಪಾತ್ರ ಅಪಾರವಾದದ್ದು ಹಾಗೂ ಮಹಿಳೆಯರ ಶೋಷಣೆಯ ವಿರುದ್ಧ ಹೋರಾಡುವ ಮನೋಭಾವ ಪ್ರತಿಯೊಬ್ಬ ಮಹಿಳೆಯರಲ್ಲಿ ಬರಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕುಮಾರ್ ಮಾತನಾಡಿ, ಮಹಿಳೆಯರ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೇ, ಮಹಿಳೆಯರಿಗೆ ಪ್ರತಿ ದಿನ ಗೌರವಿಸುವ ಮನೋಭಾವವಿರಬೇಕು. ಕೌಟುಂಬಿಕ ಹಾಗೂ ಸಾಮಾಜಿಕ ದೌರ್ಜನ್ಯಗಳನ್ನು ಎದುರಿಸುವ ಶಕ್ತಿ ಹೆಚ್ಚಾಗಬೇಕು ಹಾಗೂ ಗ್ರಾಮೀಣ ಭಾಗದಲ್ಲಿ ಲಿಂಗ ತಾರತಮ್ಯದಂತಹ ಕೆಟ್ಟ ಪಿಡುಗುಗಳು ನಾಶವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ ಗಟ್ಟಿ, ಕಮಲಾಕ್ಷಿ, ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪಾಪಾ ಭೋವಿ, ನೆಹರು ಯುವ ಕೇಂದ್ರದ ಉಪ ನಿರ್ದೇಶಕ ರಘುವೀರ್ ಸೂಟರ್ ಪೇಟೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Comments are closed.