ಕರಾವಳಿ

ಕೋವಿಡ್ ಕರ್ಫ್ಯೂ : ಮೀನುಗಾರಿಕಾ ಚಟುವಟುಕೆಗಳಿಗೆ ತೊಂದರೆ ಉಂಟಾಗದಂತೆ ನೋಡಿಕೊಳ್ಳಲು ಸೂಚನೆ

Pinterest LinkedIn Tumblr

ಮಂಗಳೂರು : ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ತಂದಿರುವ ಮಾರ್ಗಸೂಚಿಯನ್ನು ಅನುಷ್ಠಾನಗೊಳಿಸುವಾಗ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ವಿಶ್ವಾಸವನ್ನು ತೆಗೆದುಕೊಂಡು ಮಾಡುವುದು ಒಳಿತು ಎಂದುಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದರು.

ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ನಿಯಂತ್ರಣ ಕುರಿತ ಸಭೆಯಲ್ಲಿ ಮಾತನಾಡಿದರು. ಕರಾವಳಿ ಜಿಲ್ಲೆಗಳು ಇತರ ಜಿಲ್ಲೆಗಳಿಗಿಂತ ಸ್ವಲ್ಪ ವಿಭಿನ್ನವಾಗಿದ್ದು, ಮಾರ್ಗಸೂಚಿಗಳನ್ನು ಅನುಷ್ಠಾನ ಮಾಡುವಾಗ ಇಲ್ಲಿನ ಕಾರ್ಯಚಟುವಟಿಕೆಗಳನ್ನು ಅರಿತು ಕಾರ್ಯರೂಪಕ್ಕೆ ತರಬೇಕು ಎಂದರು.

ಮೀನುಗಾರಿಕಾ ಚಟುವಟುಕೆಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು, ಹೊರ ರಾಜ್ಯದಿಂದ ಉದ್ಯೋಗ ಹರಸಿ ಕಟ್ಟಡ ನಿರ್ಮಾಣ ಸೇರಿದಂತೆ ಮತ್ತಿತರ ಕೆಲಸ ನಿರ್ವಹಿಸಲು ಬಂದಿರುವ ಕಾರ್ಮಿಕರು ವಾಪಸ್ಸು ಹೋಗದಂತೆ ಎಚ್ಚರವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಮಾತನಾಡಿ, ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಹಾಗೂ ಚಿಕಿತ್ಸೆಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಖಾಸಗೀ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಯ ನಿರ್ವಹಣೆಯ ಮೇಲುಸ್ತುವಾರಿಗೆ ನೋಡಲ್ ಅಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದೆ ಎಂದರು.

ವೆನ್‍ಲಾಕ್ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ನೀಡಲು ನಿರ್ವಹಣೆ ಮಾಡುತ್ತಿರುವ ಕೆ.ಎಂ.ಸಿ ಯ ಅಧಿಕಾರಿಗಳಿಗೆ ಹೆಚ್ಚಿನ ವೈದ್ಯರುಗಳು, ಶುಶ್ರೂಷಕರು ಹಾಗೂ ಮತ್ತಿತರ ಸಿಬ್ಬಂದಿಗಳನ್ನು ನೇಮಕ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್ ಯು, ಹರೀಶ್ ಪೂಂಜ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಮಹಾನಗರ ಪಾಲಿಕೆಯ ಉಪಮೇಯರ್ ಸುಮಂಗಳಾ ರಾವ್, ಪೋಲಿಸ್ ಆಯುಕ್ತ ಶಶಿಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Comments are closed.