ಕರಾವಳಿ

ಖಾಸಗೀ ಆಸ್ಪತ್ರೆಗಳು ಶೇ.50 ರಷ್ಟು ಬೆಡ್‍ಗಳನ್ನು ಕೋವಿಡ್ ಸೋಂಕಿತರಿಗೆ ಕಾಯ್ದಿರಿಸಿ ಚಿಕಿತ್ಸೆ ನೀಡಬೇಕು: ಸಚಿವ ಪೂಜಾರಿ

Pinterest LinkedIn Tumblr

ಮಂಗಳೂರು, ಮೇ 23 : ಕೆ.ಪಿ.ಎಂ.ಇ ಖಾಯ್ದೆಯಡಿ ನೋಂದಣಿಯಾದ ಎಲ್ಲಾ ಖಾಸಗೀ ಆಸ್ಪತ್ರೆಗಳು ಶೇ. 50 ರಷ್ಟು ಬೆಡ್ ಗಳನ್ನು ಸರ್ಕಾರಿ ಆಸ್ಪತ್ರೆಯಿಂದ ಶಿಫಾರಸ್ಸು ಮಾಡುವ ಕೊರೋನಾ ರೋಗಿಗಳಿಗೆ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು.

ಅವರು ನಗರದ ಅಥೇನಾ ಆಸ್ಪತ್ರೆಯ ಕಚೇರಿ ಸಭಂಗಣದಲ್ಲಿ ಕೋವಿಡ್ ರೋಗಿಗಳಿಗೆ ಖಾಸಗೀ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದು.

ಖಾಸಗೀ ಆಸ್ಪತ್ರೆಗೆ ಆಯುಷ್ಮಾನ್ ಆರೋಗ್ಯ ಕರ್ನಾಟಕದ ಕಾರ್ಡ್ ಹೊಂದಿ ತೀರಾ ತುರ್ತು ಸಂದರ್ಭದಲ್ಲಿ ಚಿಕಿತ್ಸೆಗಾಗಿ ಕೋವಿಡ್ ರೋಗಿಗಳು ನೇರವಾಗಿ ಬಂದಾಗ ಅವರುಗಳಿಗೆ ಚಿಕಿತ್ಸೆ ನೀಡಲು ನೀರಾಕರಿಸದೆ, ಆರೋಗ್ಯ ಮಿತ್ರರ ಸಹಾಯದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರುಗಳ ರೆಫರೆನ್ಸ್ ನ್ನು ವಾಟ್ಸ್ ಆ್ಯಪ್ ಮೂಲಕ ಪಡೆದು ಚಿಕಿತ್ಸೆ ನೀಡಲು ಮುಂದಾಗಬೇಕು ಎಂದು ತಿಳಿಸಿದರು.

ಎಲ್ಲಾ ಖಾಸಗೀ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಸಾರ್ವಜನಿಕರು ಬಂದಾಗ ಆರೋಗ್ಯ ಮಿತ್ರರು ಅವರುಗಳಿಗೆ ಸಲಹೆ ಮತ್ತು ಸೂಚನೆಗಳನ್ನು ನೀಡಿ ಚಿಕಿತ್ಸೆ ಕೊಡಿಸಲು ಸಹಕರಿಸಬೇಕು ಎಂದು ಸೂಚನೆ ನೀಡಿದರು.

ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ರೋಗಿಗಳು ಡಿಸ್ಚಾರ್ಜ್ ಆಗುವ ಸಂದರ್ಭದಲ್ಲಿ ಪ್ರತೀ ರೋಗಿಯ ಡಿಸ್ಚಾರ್ಜ್ ಸಮರಿಗೆ ನೋಡಲ್ ಅಧಿಕಾರಿಗಳ ದೃಢೀಕರಣ ಪಡೆಯುವುದು ಕಡ್ಡಾಯ ಎಂದರು.

ಖಾಸಗೀ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿದಾಗ ನಿಗದಿತ ಶುಲ್ಕವನ್ನು ಪಡೆಯಲು ಸರ್ಕಾರ ಆದೇಶ ಹೊರಡಿಸಿದೆ ಎಂದ ಅವರು ಒಂದೊಮ್ಮೆ ಹೆಚ್ಚುವರಿ ಶುಲ್ಕವನ್ನು ಪಡೆದಿದ್ದು ಕಂಡುಬಂದಲ್ಲಿ ಅಂತಹಾ ಹೆಚ್ಚುವರಿ ಶುಲ್ಕವನ್ನು ಹಿಂದಿರುಗಿಸುವ ಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಸಂಸದ ನಳಿನ್ ಕುಮಾರ್ ಮಾತನಾಡಿ ಆಯುಷ್ಮಾನ್ ಆರೋಗ್ಯ ಕರ್ನಾಟಕದ ಅಡಿಯಲ್ಲಿ ಚಿಕಿತ್ಸೆಗಾಗಿ ಬರುವ ರೋಗಿಗಳನ್ನು ನಿರಾಕರಿಸದೇ ಅವರುಗಳಿಗೆ ಒಳರೋಗಿಗಳಾಗಿ ನೊಂದಣಿ ಮಾಡಿಕೊಂಡು ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ಮುಂದಾಗಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮಾತನಾಡಿ ಖಾಸಗೀ ಆಸ್ಪತ್ರೆಗಳು ಕೋವಿಡ್ ಸೋಂಕಿತರಿಗೆ ಒಳ ರೋಗಿಗಳಾಗಿ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಮಾಹಿತಿಯನ್ನು ಪೋರ್ಟಲ್‍ನಲ್ಲಿ ಪ್ರತೀ ದಿನ ತಪ್ಪದೇ ಅಪ್ ಲೋಡ್ ಮಾಡಬೇಕು ಒಂದೊಮ್ಮೆ ಆಸ್ಪತ್ರೆಯಲ್ಲಿ ಆಯುಷ್ಮಾನ್ ಆರೋಗ್ಯ ಭಾರತದ ಲಾಭ ಪಡೆದು ಚಿಕಿತ್ಸೆ ಪಡೆಯುತ್ತಿರುವ ರೋಗಿಯು ರೋಗ ಉಲ್ಬಣಗೊಂಡು ತೀವ್ರ ಘಟಕದಲ್ಲಿ ಚಿಕಿತ್ಸೆ ಪಡೆಯುವುದು ಅನಿವಾರ್ಯವಾದಲ್ಲಿ ಆ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲದೇ ಇರುವ ಸಂದರ್ಭದಲ್ಲಿ ಇತರೆ ಖಾಸಗಿ ಆಸ್ಪತ್ರೆಯಲ್ಲಿ ಖಾಲಿ ಇದ್ದಲ್ಲಿ ಆರೋಗ್ಯ ಮಿತ್ರರು ವರ್ಗಾಯಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಮಹಾನಗರಪಾಲಿಕೆ ವತಿಯಿಂದ ಕೋವಿಡ್ ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಕೋವಿಡ್ ಸೋಂಕಿತರ ಆರೋಗ್ಯ ಕ್ಷೇಮವನ್ನು ವಿಚಾರಿಸಿ ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದು ಅವಶ್ಯವೆಂದು ಕಂಡುಬಂದಲ್ಲಿ ಅಂತವರನ್ನು ಆಸ್ಪತ್ರೆಗಳ ಸಾಮಾನ್ಯ ಬೆಡ್‍ಗಳಿಗೆ ಶಿಫ್ಟ್ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಶೋಕ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಕುಮಾರ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಹಾಗೂ ಎ.ಬಿ.ಆರ್.ಕೆ ನೋಡಲ್ ಅಧಿಕಾರಿ ಡಾ. ರತ್ನಾಕರ್ , ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Comments are closed.