ಬೆಂಗಳೂರು: ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಹಿರಿಯ ಶಾಸಕ ಸಿಎಂ ಉದಾಸಿ ಇಹಲೋಕ ತ್ಯಜಿಸಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಸಿ.ಎಂ.ಉದಾಸಿ (77) ಅವರು ಇಂದು (ಜೂ.8 ಮಂಗಳವಾರ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ನಾಲ್ಕೈದು ದಿನಗಳ ಹಿಂದೆ ಸಿ.ಎಂ.ಉದಾಸಿ ಅವರು ಆರೋಗ್ಯದಲ್ಲಿ ಏರುಪೇರಾಗಿದ್ದು ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಮೃತದೇಹವನ್ನು ಬೆಂಗಳೂರಿನಿಂದ ಹಾನಗಲ್‌ಗೆ ಕೊಂಡೊಯ್ಯಲು ತಿರ್ಮಾನಿಸಲಾಗಿದ್ದು, ನಾಳೆ (ಜೂ.9) ಹಾನಗಲ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಿ.ಎಂ.ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿಯಾಗಿದ್ದು ಲೋಕೋಪಯೋಗಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು.
Comments are closed.