ಮಂಗಳೂರು: ಮೊದಲ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದ್ದು, ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಲು ಬಂಟ್ಸ್ ಹಾಸ್ಟೆಲ್ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯಿಂದ ಮೆರವಣಿಗೆಯಲ್ಲಿ ದ.ಕ ಜಿಲ್ಲಾಧಿಕಾರಿ ಕಚೇರಿಗೆ ಬ್ರಿಜೇಶ್ ಚೌಟ ಆಗಮಿಸಿದರು. ಇನ್ನು ನಾಮಪತ್ರವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ಸ್ವೀಕರಿಸಿದರು.
ಚೌಟ ಅವರು ನಾಮಪತ್ರ ಸಲ್ಲಿಸುವ ವೇಳೆ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರಥಿ ಮುರುಳ್ಯ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೇ ಮಾಧವ ಗೌಡ ಮತ್ತಿತರರು ಇದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಸಭೆಯಲ್ಲಿ ನೆರೆದಿದ್ದವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸ್ವಾಗತಿಸಿದರು.
ಸಭೆಯಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆಲ್ಲುತ್ತದೆ. ನರೇಂದ್ರ ಮೋದಿ ಮತ್ತೊಮ್ಮೆ ಭಾರತದ ಪ್ರಧಾನಿಯಾಗುವುದು ಗ್ಯಾರಂಟಿ. ದೇಶದ ಜನರು ಬಿಜೆಪಿಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಿದ್ದಾರೆ. ಸಾಕಷ್ಟು ಯುವ ನಾಯಕರು ಮತ್ತು ಯುವ ಮೋರ್ಚಾದ ಮುಖಂಡರು ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಇಂದು ನಮ್ಮ ಪಕ್ಷವು ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರನ್ನು ಆಯ್ಕೆ ಮಾಡಿದೆ ಎಂದು ಹೇಳಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ನಮ್ಮ ಪಕ್ಷವು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷಗಳಲ್ಲಿ ಒಂದಾಗಿದೆ. ನಾನು ಸೈನಿಕನಾಗಿದ್ದೆ ಹಾಗೂ ಇಂದು ನನಗೆ ಇಲ್ಲಿ ಹುದ್ದೆ ಸಿಕ್ಕಿದೆ. ಸಾರ್ವಜನಿಕರ ಬೆಂಬಲವಿದ್ದರೆ ಭಾರತವು ಅಭಿವೃದ್ಧಿ ಹೊಂದುತ್ತದೆ. ಮುಂದಿನ 20 ದಿನಗಳಲ್ಲಿ ದಕ್ಷಿಣ ಕನ್ನಡವನ್ನು ಮತ್ತೆ ಬಿಜೆಪಿಯ ಕೋಟೆಯನ್ನಾಗಿ ಮಾಡೋಣ. ನಾವು ನರೇಂದ್ರ ಮೋದಿಯವರ ಸಂದೇಶವನ್ನು ತಿಳಿಸಿ ಎಲ್ಲರನ್ನೂ ತಲುಪಬೇಕು ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿ.ಟಿ.ರವಿ, ಭಾರತದಲ್ಲಿ ಬಿಜೆಪಿಯ ಅಲೆ ಹರಡುತ್ತಿದೆ. ದಕ್ಷಿಣ ಕನ್ನಡದಲ್ಲಿ ಕೇಸರಿ ಅಲೆ ಇದೆ ಎಂದು ಹೇಳಿದರು.
ಸಭೆಯಲ್ಲಿ ನಾಯಕರಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಸಿ.ಟಿ.ರವಿ, ಸುಧೀರ್ ಶೆಟ್ಟಿ ಕಣ್ಣೂರು, ಶಾಸಕರಾದ ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯಕ್, ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಅರುಣ್ ಕುಮಾರ್ ಪುತ್ತಿಲ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಯಶ್ ಪಾಲ್ ಸುವರ್ಣ, ಸುರೇಶ್ ಶೆಟ್ಟಿ, ಮೊನಪ್ಪ ಭಂಡಾರಿ, ಪ್ರತಾಪ್ ಸಿಂಹ ನಾಯಕ್, ಬಾಲಕೃಷ್ಣ ಭಟ್, ಪದ್ಮನಾಭ ಪ್ರಸಾದ್, ಮಲ್ಲಿಕಾ ಪ್ರಸಾದ್ ಉಪಸ್ಥಿತರಿದ್ದರು.
Comments are closed.