ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ (66) ಸೋಮವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಅವರು ತ್ರಾಸಿ ಮಂಡಲ ಪಂಚಾಯಿತಿ ಅಧ್ಯಕ್ಷರಾಗಿದ್ದ ಅವರು, ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ, ಹೆಮ್ಮಾಡಿ ಪಂಚಗಂಗಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದರು. ದೇವಾಡಿಗ ಸಮಾಜ ಸೇವಾ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳಲ್ಲಿ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ವರ್ಷಗಳಿಂದೀಚೆಗೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಇತ್ತೀಚೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮೃತರಿಗೆ ಪತ್ನಿ, ಪುತ್ರಿ ಹಾಗೂ ಮೂವರು ಪುತ್ರರಿದ್ದಾರೆ. ಮಂಗಳವಾರ ಮಧ್ಯಾಹ್ನ ತ್ರಾಸಿಯ ಅವರ ಸ್ವಗ್ರಹದಲ್ಲಿ ಸಾರ್ವಜನಿಕರಿಗೆ ಹಾಗೂ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು ನಂತರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ, ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಶಾಸಕ ಗುರುರಾಜ್ ಗಂಟಿಹೊಳೆ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ ಸೇರಿದಂತೆ ಅನೇಕರು ಮೃತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Comments are closed.