ಕರಾವಳಿ

ಕುಂದಾಪುರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ | ವಿದ್ಯಾರ್ಥಿಗಳಿಗೆ ‘ವೃತ್ತಿ ಮಾರ್ಗದರ್ಶನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಶಿಬಿರ’

Pinterest LinkedIn Tumblr

ಕುಂದಾಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕುಂದಾಪುರ ಇವರ ವತಿಯಿಂದ ತಾಲೂಕಿನ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ‘ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಶಿಬಿರ’ ಫೆ.17ರಂದು ಕುಂದಾಪುರದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು. ಕೇವಲ ತಮ್ಮ ಗುರಿಯತ್ತ ಚಿತ್ತವನ್ನಿಟ್ಟುಕೊಂಡು ಸಾಧನೆಗೈಯಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಚಕ್ರವರ್ತಿ ಆರ್. ಮಾತನಾಡಿ, ಇಲಾಖೆಯ ಸವಲತ್ತುಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಕರೆ ನೀಡಿದರು.

ಸಿಬ್ಬಂದಿಗಳಿಗೆ, ಪ್ರತಿಭಾನ್ವಿತರಿಗೆ ಸನ್ಮಾನ: ಇದೇ ಸಂದರ್ಭದಲ್ಲಿ ರಾಜ್ಯಮಟ್ಟದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 10ನೇ ರ್ಯಾಂಕ್ ಪಡೆದ ಕುಂದಾಪುರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದ ಜ್ಞಾನವಿ ಶೆಟ್ಟಿ ಅವರನ್ನು ಸನ್ಮಾನಿಸಿ ನಗದು ಬಹುಮಾನ ನೀಡಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ದಾಖಲಿಸಿದ ವಿದ್ಯಾರ್ಥಿನಿಲಯಗಳ ಮೇಲ್ವಿಚಾರಕರು, ಉತ್ತಮ ಸೇವೆ ಸಲ್ಲಿಸಿದ ಅಡುಗೆ ಸಿಬ್ಬಂದಿ ಹಾಗೂ ಮೆಂಟರ್‌ಗಳನ್ನು ಗೌರವಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ: ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಅವರು ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿಕೊಟ್ಟರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಕುಂದಾಪುರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್  ನಂಜನಾಯ್ಕ ಎನ್., ಉಡುಪಿಯ ಭಾರತಿ ಡಿಜಿಟಲ್ ನಿರ್ದೇಶಕ ರಂಗ ನಾಯಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಹೇಶ್ ಮತ್ತು ಹರೀಶ್ ಕುಮಾರ್ ಶೆಟ್ಟಿ ಅವರುಗಳು ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನ, ಇಂಜಿನಿಯರಿಂಗ್ ಕ್ಷೇತ್ರ, ಕಂದಾಯ ಇಲಾಖೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಮತ್ತು ಉದ್ಯೋಗಾವಕಾಶಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ  ಆಶಾದೇವಿ ನಾಯಕ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಲತಾ ಸ್ವಾಗತಿಸಿ, ಮೇಲ್ವಿಚಾರಕ ಶೇಖರ್ ಗೌಡ ನಿರೂಪಿಸಿದರು.

Comments are closed.