ಕರಾವಳಿ

ವಾರಾಹಿ ಯೋಜನೆಯಲ್ಲಿ ರೈತರಿಗೆ ಅನ್ಯಾಯ ಆಗಲು ಬಿಡಲ್ಲ, ಎಲ್ಲಾ ರೈತರಿಗೆ ಅನುಕೂಲವಾಗುವಂತೆ ಕ್ರಮ: ಕುಂದಾಪುರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

Pinterest LinkedIn Tumblr

ಕುಂದಾಪುರ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕುಂದಾಪುರದ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್‌ ಹೆಲಿಪ್ಯಾಡ್‌ ಬಳಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ ಕಡೆಗೆ ಮತದಾರರ ಒಲವಿರುತ್ತದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆ. ಅಭಿವೃದ್ಧಿಯ ಜೊತೆಗೆ ಜನರ ಆದಾಯ ಕೂಡ ಜಾಸ್ತಿ ಆಗಿದೆ. ಅದರಲ್ಲೂ ಮಹಿಳಾ ಮತದಾರರು ಸಂತೋಷದಲ್ಲಿದ್ದಾರೆ. ಎರಡು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ ಎಂದರು.

ವಾರಾಹಿ ಯೋಜನೆಗೆ ಸಂಬಂಧಪಟ್ಟಂತೆ ಈಗಾಗಲೇ ಎರಡು ಕಡೆಯ ರೈತರು ಮನವಿ ನೀಡಿದ್ದು, ಯಾರಿಗೂ ಅನ್ಯಾಯ ಆಗಬಾರದು ಎಂಬುದೇ ಜಿಲ್ಲಾಡಳಿತ ಹಾಗೂ ಸರ್ಕಾರದ ಆಶಯವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದರು. ಈಗಾಗಲೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತಾಪಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಇನ್ನು ಬೈಂದೂರು ನೂತನ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣಕ್ಕೆ ಒಂದಷ್ಟು ಸರ್ಕಾರಿ ಬಸ್‌ಗಳು ಪ್ರವೇಶಿಸುವುದಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ ಕರೆದು ಶೀಘ್ರವೇ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ, ಪ್ರಮುಖರಾದ ಅರವಿಂದ ಪೂಜಾರಿ, ಸಂಪಿಗೇಡಿ ಸಂಜೀವ ಶೆಟ್ಟಿ, ಶೇಖರ್ ಪೂಜಾರಿ, ರಮೇಶ್ ಕಾಂಚನ್, ಸಂತೋಷ ಶೆಟ್ಟಿ ಬಲಾಡಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಕುಂದಾಪುರ ಉಪವಿಭಾಗ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಕುಂದಾಪುರ ಇನ್ಸ್‌ಪೆಕ್ಟರ್ ಜಯರಾಮ್ ಗೌಡ, ಯುವ ಮೆರಿಡಿಯನ್ ಆಡಳಿತ ಪಾಲುದಾರ ಬಿ. ಉದಯ್ ಕುಮಾರ್ ಶೆಟ್ಟಿ ಇದ್ದರು.

 

Comments are closed.