ಮಂಗಳೂರು: ಯುವತಿಯೋರ್ವಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಬಿ.ಸಿ.ರೋಡ್ ಸರಕಾರಿ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದಿದೆ.
ಕಕ್ಯಪದವು ನಿವಾಸಿ ಲಾವಣ್ಯ (22) ಮೃತ ಯುವತಿ ಎಂದು ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಚೇತನ್ ಎಂಬುದಾಗಿ ತಿಳಿದುಬಂದಿದೆ. ಈತ ಯುವತಿಯ ದೂರದ ಸಂಬಂಧಿಯಾಗಿದ್ದು ಆತ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಲಾವಣ್ಯ ಅವರು ಕಕ್ಯಪದವು ಕಡೆಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕುಳಿತಿದ್ದರು ಎನ್ನಲಾಗಿದೆ. ಈ ವೇಳೆ ಅವರು ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ, “ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ” ಎಂದು ತಿಳಿಸಿದ್ದು, ಬಳಿಕ ಕರೆ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಲಾಗಿದೆ.
ಬಸ್‌ನಲ್ಲಿದ್ದ ಪ್ರಯಾಣಿಕರ ಮಾಹಿತಿ ಪ್ರಕಾರ, ಬಳಿಕ ಯುವತಿ ಬಸ್‌ನಿಂದ ಕೆಳಗಿಳಿದಿದ್ದಾರೆ. ಅವರು ಇಳಿದ ತಕ್ಷಣ ಯುವಕ ಆಕೆಯನ್ನು ಬೆನ್ನಟ್ಟಿದ್ದ ಎನ್ನಲಾಗಿದ್ದು, ತನ್ನ ಬ್ಯಾಗ್‌ನಿಂದ ಹರಿತವಾದ ಆಯುಧವನ್ನು ಹೊರತೆಗೆದಾಗ ಯುವತಿ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ವೇಳೆ ಯುವತಿಯ ಮೇಲೆ ಮಾರಕ ಹಲ್ಲೆ ನಡೆಸಿ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಶೋಧ ಮುಂದುವರೆಸಿದ್ದಾರೆ.
Comments are closed.