ಮಂಗಳೂರು, ಫೆ. 14 : ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಅಂಗವಾಗಿ ದ.ಕ.ಜಿಲ್ಲೆಯಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಫೆ. 22ರಂದು ದ್ವಿತೀಯ ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿಶೇಷವಾಗಿ ವಲಸೆ ಕಾರ್ಮಿಕರ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ತಿಳಿಸಿದರು. ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಐದು ವರ್ಷದೊಳಗಿನ ಒಟ್ಟು 1,68,479 ಮಕ್ಕಳಿದ್ದು, ಇವರಲ್ಲಿ 1,692 ಮಕ್ಕಳನ್ನು ವಲಸೆ ಕಾರ್ಮಿಕರ ಮಕ್ಕಳೆಂದು ಗುರುತಿಸಲಾಗಿದೆ. ಲಸಿಕಾ ಕಾರ್ಯಕ್ರಮದ ಯಶಸ್ಸಿಗಾಗಿ ಜಿಲ್ಲೆಯಲ್ಲಿ ಒಟ್ಟು 921 ಲಸಿಕಾ ಕೇಂದ್ರಗಳು, 10 ಸಂಚಾರಿ ತಂಡ ಹಾಗೂ 26 ಟ್ರಾನ್ಸಿಟ್ ಲಸಿಕಾ ಘಟಕಗಳು ಕಾರ್ಯ ನಿರ್ವಹಿಸಲಿವೆ ಎಂದು ಪೋಲಿಯೊ ಕಾರ್ಯಕ್ರಮ ಅಧಿಕಾರಿ ಸತೀಶ್ಚಂದ್ರ ಮಾಹಿತಿ ನೀಡಿದರು. ಮನಪಾ ಆಯುಕ್ತೆ ಹೆಫ್ಸಿಬಾ ರಾಣಿ ಕೊರ್ಲಪಾಟಿ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕಿ ಡಾ. ರಾಜೇಶ್ವರಿ ದೇವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಜಾ. ರಾಜೇಶ್, ಮನಪಾ ಆರೋಗ್ಯ ಅಧಿಕಾರಿ ಮಂಜಯ್ಯ ಶೆಟ್ಟಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.