ಕನ್ನಡ ವಾರ್ತೆಗಳು

ಮಂಗಳಾ ಕ್ರೀಡಾಂಗಣದ ಸಿಂಥೆಟಿಕ್ ಟ್ರ್ಯಾಕ್‌ ಮೇಲೆ ಸಾರ್ವಜನಿಕರ ಉಪಯೋಗಕ್ಕೆ ನಿರ್ಬಂಧ : ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ 

Pinterest LinkedIn Tumblr

Dc_Ibrahim_Pics

ಮಂಗಳೂರು,ಫೆ.27 : ನಗರದ ಮಂಗಳಾ ಕ್ರೀಡಾಂಗಣದಲ್ಲಿನ ಸಿಂಥೆಟಿಕ್ ಟ್ರ್ಯಾಕ್‌ನ ಸುಸ್ಥಿತಿ ಕಾಪಾಡುವ ಹಾಗೂ ಸಂರಕ್ಷಿಸುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಉಪಯೋಗಿಸುವು ದನ್ನು ನಿರ್ಬಂಧಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ತಿಳಿಸಿದ್ದಾರೆ. ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, 3.53 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಸಿಂಥೆಟಿಕ್ ಟ್ರ್ಯಾಕ್ ಕ್ರೀಡಾಪಟುಗಳ ತರಬೇತಿಗಾಗಿ ಉಪಯೋಗವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಫೆ. 25ರಂದು ಕ್ರೀಡಾ ಸಚಿವ ಕೆ.ಅಭಯಚಂದ್ರ ಜೈನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ ಅವರು, ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣ ಮತ್ತು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಕೂಡಾ ಸಿಂಥೆಟಿಕ್ ಟ್ರ್ಯಾಕ್‌ನ್ನು ಸಾರ್ವಜನಿಕರು ಉಪಯೋಗಿಸುವುದನ್ನು ನಿರ್ಬಂಧಿಸಲಾಗಿದೆ ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪಾಂಡುರಂಗ ಗೌಡ ಮಾತನಾಡಿ, ಸಾರ್ವಜನಿಕರು ಜಾಗಿಂಗ್ ಮಾಡುವುದರಿಂದ ಕ್ರೀಡಾಳುಗಳ ತರಬೇತಿಗೆ ಅಡ್ಡಿಯಾಗುತ್ತಿರುವ ಬಗ್ಗೆ ಕೂಡಾ ದೂರುಗಳು ಬಂದಿವೆ ಎಂದರು. ಸಿಂಥೆಟಿಕ್ ಟ್ರ್ಯಾಕ್‌ನಲ್ಲಿ ಸೂಕ್ತವಾದ ಶೂ ಧರಿಸಿ ಓಡಾಟ ಮಾಡಬೇಕಾಗಿದ್ದು, ಸಾರ್ವಜನಿಕರು ಮಡ್ ಟ್ರ್ಯಾಕ್ ಶೂ ಅಥವಾ ಇತರೆ ಶೂ ಧರಿಸಿ ಓಡಾಡುವುದರಿಂದ ಸಿಂಥೆಟಿಕ್ ಟ್ರ್ಯಾಕ್ ಹಾಳಾಗುತ್ತಿದೆ ಎಂದು ಅವರು ತಿಳಿಸಿದರು.

ಮಂಗಳಾ ಕ್ರೀಡಾಂಗಣದಲ್ಲಿ ಮೇ 1ರಿಂದ 5ರ ವರೆಗೆ ರಾಷ್ಟ್ರಮಟ್ಟದ ಫೆಡರೇಶನ್ ಕಪ್ ಅಥ್ಲೆಟಿಕ್ ಚಾಂಪಿಯನ್‌ಷಿಪ್ ನಡೆಯಲಿರುವ ಕಾರಣ ಸಿಂಥೆಟಿಕ್ ಟ್ರ್ಯಾಕ್‌ನ ಗುಣಮಟ್ಟ ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಅವರು ತಿಳಿಸಿದರು

Write A Comment