ಮಂಗಳೂರು, ಮಾ.19: ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆಯ ಖಾಸಗಿ ಶಾಲೆಯ ಬಾಲಕಿಗೆ ವಾಹನ ಚಾಲಕ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖಾ ತಂಡವೊಂದನ್ನು ರಚಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಉಳ್ಳಾಲ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ಪಾಂಡೇಶ್ವರ ಮಹಿಳಾ ಠಾಣೆಗೆ ಹಸ್ತಾಂತರಿಸಲಾಗಿದ್ದು, ಮಂಗಳೂರು ನಗರ ಪೊಲೀಸ್ ಆಯುಕ್ತ ಎಸ್.ಮುರುಗನ್ ನೇತೃತ್ವ ದಲ್ಲಿ ಪ್ರಕರಣದ ತನಿಖೆ ನಡೆಸಲಾಗುತ್ತದೆ. ಸಚಿವರ ಸೂಚನೆಯಂತೆ ಪೊಲೀಸ್ ಆಯುಕ್ತರು ಉನ್ನತ ಮಟ್ಟದ ತನಿಖಾ ತಂಡವನ್ನು ರಚಿಸಿದ್ದಾರೆ.
ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿದೇವಿ, ವೆನ್ಲಾಕ್ ಆಸ್ಪತ್ರೆಯ ಫೋರೆನ್ಸಿಕ್ ವಿಭಾಗದ ಡಾ.ರಮೇಶ್, ಲೇಡಿಗೋಶನ್ ಆಸ್ಪತ್ರೆಯ ಡಾ.ಸುಂದರಿ ಮತ್ತು ಡಾ.ಕಾರೊಲಿನ್ ಪಿ.ಡಿಸೋಜ, ಡಾ.ಜಮೀಲಾ ಹಾಗೂ ಪಾಂಡೇಶ್ವರ ಇನ್ಸ್‌ಪೆಕ್ಟರ್ ಕಲಾವತಿ ತಂಡದಲ್ಲಿದ್ದಾರೆ. ಈಗಾಗಲೇ ತಂಡವು ತನಿಖೆಯನ್ನು ಆರಂಭಿಸಿದೆ. ತಂಡವು ಬಾಲಕಿ ಮತ್ತು ಹೆತ್ತವರು, ಶಾಲೆಯ ಸಿಬ್ಬಂದಿ, ಶಿಕ್ಷಕರು ಹಾಗೂ ಶಾಲಾಡಳಿತ ಮಂಡಳಿಯ ಜತೆ ಸಮಾಲೋಚನೆ ಮಾಡಲಿದೆ ಎಂದವರು ತಿಳಿಸಿದ್ದಾರೆ.
ಸರಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಕಾರಣಕ್ಕೂ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿ ವಿರುದ್ಧ ಈಗಾಗಲೇ ಉಳ್ಳಾಲ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮಹಿಳಾ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದೀಗ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವೊಂದನ್ನು ರಚಿಸಲಾಗಿದೆ. ಇದರಲ್ಲಿ ವೈದ್ಯರು ಹಾಗೂ ಪೊಲೀಸ್ ಅಧಿಕಾರಿಗಳಿದ್ದು, ಇವರು ನೀಡಿದ ವರದಿಯ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರಗಿಸಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಉದ್ದೇಶ ಸರಕಾರಕ್ಕಿಲ್ಲ. ಘಟನೆಯ ಬಗ್ಗೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ ಎಂದು ಸಚಿವ ಖಾದರ್ ಪತ್ರಿಕೆಗೆ ತಿಳಿಸಿದ್ದಾರೆ.