ಕನ್ನಡ ವಾರ್ತೆಗಳು

ಗ್ರಾಹಕ ಜಾಗೃತಿ ಕಾರ್ಯಕ್ರಮಗಳ ವಿಸ್ತರಣೆ: ಜಿ.ಪಂ. ಅಧ್ಯಕ್ಷರ ಕರೆ

Pinterest LinkedIn Tumblr

Ngo_workshop_photo_1

ಮಂಗಳೂರು, ಎಪ್ರಿಲ್. 17  : ನಕಲಿ ವಸ್ತುಗಳ ಖರೀದಿ ಅಥವಾ ಖರೀದಿಯಲ್ಲಿ ವಂಚನೆಗೊಳಗಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಗಳನ್ನು ಪ್ರತೀ ಗ್ರಾಮ ಮಟ್ಟದಲ್ಲೂ ನಡೆಸಬೇಕಾದ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ ತಿಳಿಸಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಗ್ರಾಹಕ ಜಾಗೃತಿ ಕುರಿತು ಸ್ತ್ರೀಶಕ್ತಿ ಗುಂಪುಗಳ ಸದಸ್ಯರಿಗೆ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಗ್ರಾಹಕರಲ್ಲಿ ಖರೀದಿ ಸಾಮರ್ಥ್ಯ ಹೆಚ್ಚಳವಾದಂತೆ, ಅವರನ್ನು ಮೋಸಗೊಳಿಸುವ ಪ್ರಯತ್ನಗಳೂ ನಡೆಯುತ್ತಿವೆ. ಅನೇಕರಿಗೆ ಗ್ರಾಹಕ ಹಕ್ಕುಗಳ ಬಗ್ಗೆ ಅರಿವೇ ಇಲ್ಲದಿರುವುದರಿಂದ, ವಂಚನೆಯನ್ನು ನಿಯಂತ್ರಿಸುವ ಪ್ರಯತ್ನಗಳಿಗೆ ಹಿನ್ನೆಡೆಯಾಗುತ್ತಿವೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರೆ, ವಂಚನೆಗಳನ್ನು ತಡೆಗಟ್ಟಬಹುದು ಎಂದು ಜಿ.ಪಂ. ಅಧ್ಯಕ್ಷರು ಅಭಿಪ್ರಾಯಪಟ್ಟರು.

Ngo_workshop_photo_2 Ngo_workshop_photo_3 Ngo_workshop_photo_4 Ngo_workshop_photo_5 Ngo_workshop_photo_6

ಸ್ತ್ರೀಶಕ್ತಿ ಸಂಘಟನೆಗಳಿಗೆ ಗ್ರಾಹಕ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಖರೀದಿಯಲ್ಲಿ ಮಹಿಳೆಯರ ಪಾತ್ರ ಪ್ರಾಮುಖ್ಯವಾಗಿದೆ. ಅನೇಕ ಸಂದರ್ಭದಲ್ಲಿ ಮಹಿಳೆಯರೇ ಸುಲಭವಾಗಿ ಮಾರುಕಟ್ಟೆಗಳಲ್ಲಿ ಮೋಸಕ್ಕೊಳಗಾಗುತ್ತಿದ್ದಾರೆ. ಮಹಿಳೆಯರು ಗ್ರಾಹಕ ಕಾಯಿದೆಗಳ ಬಗ್ಗೆ ತಿಳಿದುಕೊಂಡರೆ, ಸಮಾಜದಲ್ಲಿ ಪರಿಣಾಮಕಾರಿ ಬದಲಾವಣೆಯಾಗಬಲ್ಲದು ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ  ಹೇಳಿದರು.

ಸಂಪೂರ್ಣ ಸಾಕ್ಷರವಾಗಿರುವ ದ.ಕ. ಜಿಲ್ಲೆಯಲ್ಲಿ ಗ್ರಾಹಕ ಜಾಗೃತಿಯಲ್ಲೂ ಕ್ರಾಂತಿ ಉಂಟಾಗಬೇಕು ಎಂದು ಅವರು ಹೇಳಿದರು. ಇದೇ ಸಂದರ್ಭದಲ್ಲಿ ಗ್ರಾಹಕ ಜಾಗೃತಿ ಮೂಡಿಸುವ ಕಿರುಹೊತ್ತಿಗೆಯನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು. ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಜೆ. ಸಾಲಿಯಾನ್ ಅವರು ಗ್ರಾಹಕ ಕಾಯಿದೆಗಳ ಮಾಹಿತಿ ನೀಡಿದರು. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕ ಶರಣಬಸಪ್ಪ, ಸಹಾಯಕ ನಿರ್ದೇಶಕಿ ಸುನಂದಾ ಮತ್ತಿತರರು ಇದ್ದರು.

Write A Comment