ಬೆಳ್ತಂಗಡಿ, ಜುಲೈ.11 : ಇಲ್ಲಿನ ಉಜಿರೆ ಸಮೀಪದ ನೀರಚಿಲುಮೆ ಎಂಬಲ್ಲಿ ಟೆಂಪೋ ಟ್ರಾವೆಲರ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗಾಯಾಳುಗಳನ್ನು ಬೆಂಗಳೂರು ಮೂಲದ ಮುನಿರತ್ನಮ್ಮ ಹಾಗೂ ಆಯಮ್ಮ ಎಂದು ಗುರುತಿಸಲಾಗಿದ್ದು, ಇವರು ಟೆಂಪೋ ಟ್ರಾವೆಲರ್ ನಲ್ಲಿ ಪ್ರಯಾಣಿಸುತ್ತಿದ್ದರು.
ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಟೆಂಪೋ ಟ್ರಾವಲರ್ ಹಾಗೂ ಉಜಿರೆ ಮಾರ್ಗವಾಗಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಡುವೆ ಈ ಅಪಘಾತ ಸಂಭವಿಸಿದ್ದು, ಟೆಂಪೋ ಟ್ರಾವೆಲರ್ ನಲ್ಲಿದ್ದ ಇನ್ನು ಅನೇಕ ಮಂದಿ ಗಾಯಗೊಂಡಿದ್ದಾರೆ. ಇವರ ಹೆಸರು ಮತ್ತು ವಿವರಗಳು ತಕ್ಷಣಕ್ಕೆ ತಿಳಿದುಬಂದಿಲ್ಲ. ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಸ್ಥಳೀಯ ನೆರವಿನಿಂದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಯಿತು.
ಘಟನೆಯ ಮಾಹಿತಿ ಪಡೆದ ಬೆಳ್ತಂಗಡಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಿದರು.
ಸಂಚಾರಕ್ಕೆ ಅಡ್ಡಿ: ಅಪಘಾತದ ಹಿನ್ನೆಲೆಯಲ್ಲಿ ಕೆಲವು ತಾಸುಗಳ ಕಾಲ ಸಂಚಾರಕ್ಕೆ ಅಡಚಣೆಯುಂಟಾಯಿತು. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಠಾಣಾ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

