ಕನ್ನಡ ವಾರ್ತೆಗಳು

ಸ್ವಚ್ಛತೆಗೆ ಆದ್ಯತೆ: ಗ್ರಾ.ಪಂ. ನೂತನ ಆಡಳಿತಗಳಿಗೆ ಜಿ.ಪಂ. ಅಧ್ಯಕ್ಷರ ಕರೆ

Pinterest LinkedIn Tumblr

Zp_news_photo_2

ಮಂಗಳೂರು, ಜುಲೈ. 15: ಗ್ರಾಮ ಪಂಚಾಯತ್‌ಗಳಲ್ಲಿ ನೂತನ ಆಡಳಿತ ಅಸ್ತಿತ್ವಕ್ಕೆ ಬಂದಿದ್ದು, ಸ್ವಚ್ಛತೆ ಮತ್ತು ತ್ಯಾಜ್ಯ ವಿಲೇವಾರಿಗೆ ಹೆಚ್ಚು ಒತ್ತು ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ ಕರೆ ನೀಡಿದ್ದಾರೆ.ಅವರು ಬುಧವಾರ ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು/ಪಿಡಿ‌ಓಗಳಿಗೆ ನಡೆದ ಮಂಗಳೂರು ತಾಲೂಕು ಮಟ್ಟದ ಘನ/ದ್ರವ ತ್ಯಾಜ್ಯ ವಿಲೇವಾರಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ತ್ಯಾಜ್ಯ ವಿಲೇವಾರಿಯು ಸವಾಲಿನ ಕಾರ್ಯವಾಗಿದೆ. ಈಗಾಗಲೇ ಜಿಲ್ಲೆಯ ಕೆಲವು ಗ್ರಾಮ ಪಂಚಾಯತ್‌ಗಳು ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಪಂಚಾಯತ್‌ಗಳು ಈ ನಿಟ್ಟಿನಲ್ಲಿ ಮುಂದ ಬರಬೇಕು. ಮುಂದಿನ ಅಕ್ಟೋಬರ್ 2 ರೊಳಗೆ ಇಡೀ ಜಿಲ್ಲೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಜಿ.ಪಂ. ಉಪಾಧ್ಯಕ್ಷ ಸತೀಶ್ ಕುಂಪಲ ಅವರು ಮಾತನಾಡಿ, ಪ್ರತೀ ಗ್ರಾಮ ಪಂಚಾಯತ್‌ಗಳು ತ್ಯಾಜ್ಯ ವಿಲೇವಾರಿಯನ್ನು ಆದ್ಯತೆಯನ್ನಾಗಿ ಪರಿಗಣಿಸಬೇಕು. ಇದರಿಂದ ಜನಸಾಮಾನ್ಯರ ಸಮಸ್ಯೆಗಳು ದೂರವಾಗಲಿವೆ. ನೂತನ ಗ್ರಾಮ ಪಂಚಾಯತ್ ಅಡಳಿತಗಳು ಈ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಹೇಳಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀವಿದ್ಯಾ ಮಾತನಾಡಿ, ಸ್ವಚ್ಛತಾ ಕಾರ್ಯ ಮತ್ತು ತ್ಯಾಜ್ಯ ವಿಲೇವಾರಿಗಳನ್ನು ಮುಂದಿನ ದಿನಗಳಲ್ಲಿ ಪ್ರತೀ ತಿಂಗಳು ಪ್ರಗತಿ ಪರಿಶೀಲನೆ ನಡೆಸಲಾಗುವುದು. ನೈರ್ಮಲ್ಯ ಕೆಡಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕ್ರಮ ಕೈಗೊಳ್ಳಲಿದೆ ಎಂದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದ ಜಿಲ್ಲಾ ನೆರವು ಘಟಕದ ಸಂಯೋಜಕಿ ಮಂಜುಳಾ, ಪ್ರತೀ ಗ್ರಾಮ ಪಂಚಾಯತ್‌ಗಳು ತಮ್ಮಲ್ಲಿ ನೀರು ನೈರ್ಮಲ್ಯ ಸಮಿತಿಗಳನ್ನು ಸಕ್ರಿಯಗೊಳಿಸಬೇಕು. ಪ್ರತೀ ವಾರ್ಡುವರು ಸ್ವಚ್ಛತಾ ತಂಡ ರಚಿಸಬೇಕಾಗಿದೆ. 40 ಮೈಕ್ರಾನ್‌ಗಿಂತ ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್‌ಗಳ ಬಳಕೆಗೆ ನಿಷೇಧಿಸಲು ಗ್ರಾಮ ಪಂಚಾಯತ್‌ಗಳಿಗೆ ಅಧಿಕಾರವಿದೆ. ಸಮರ್ಪಕ ತ್ಯಾಜ್ಯ ವಿಲೇವರಿ ಮಾಡದ ಮತ್ತು ಎಲ್ಲೆಂದೆರಲ್ಲಿ ಕಸ ಬಿಸಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಕೂಡಾ ಅಧಿಕಾರವಿದೆ. ವ್ಯಾಪಾರಸ್ಥರ ಲೈಸನ್ಸನ್ನೂ ರದ್ದು ಮಾಡಬಹುದು. ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ನೀಡಿ, ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಲು ಗ್ರಾ.ಪಂ.ಗಳು ಮುಂದೆ ಬರಬೇಕು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷೆ ರಜನಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್.ಆರ್. ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.

Write A Comment