ಕನ್ನಡ ವಾರ್ತೆಗಳು

ಪೆಟ್ರೋಲ್ ಬಂಕ್‌ ಸೇರಿದಂತೆ ಜಿಲ್ಲೆಯ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಜಿಲ್ಲಾಧಿಕಾರಿ ಆದೇಶ

Pinterest LinkedIn Tumblr

CC_CAMARA_MEET

ಮಂಗಳೂರು, ಡಿ.8: ಸುರಕ್ಷತೆ ಹಾಗೂ ಪಾರದರ್ಶಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ದ.ಕ.ಜಿಲ್ಲೆಯ ಎಲ್ಲಾ ಧಾರ್ಮಿಕ, ಶಿಕ್ಷಣ, ಕೇಂದ್ರಗಳು ಮಾರುಕಟ್ಟೆಗಳು, ಬಸ್ ನಿಲ್ದಾಣಗಳು, ಮಾಲ್‌ಗಳು, ರೈಲ್ವೆ ನಿಲ್ದಾಣ, ಸರಕಾರಿ ಕಚೇರಿಗಳು, ಬಂದರು ದಕ್ಕೆ ಪ್ರದೇಶ ಸೇರಿದಂತೆ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಕಾರ್ಯವನ್ನು ತ್ವರಿತಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಸಂಬಂಧಿಸಿ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಿಸಿಟಿವಿಯ ಗುಣಮಟ್ಟ, ಸಂಗ್ರಹಣಾ ಸಾಮರ್ಥ್ಯ ಹಾಗೂ ನಿರ್ವಹಣೆ ಕುರಿತಂತೆಯೂ ನಿಗಾ ವಹಿಸಬೇಕು ಎಂದು ತಿಳಿಸಿದರು.

ದ.ಕ. ಜಿಲ್ಲೆಯ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿಯೂ ಡಿ.31ರೊಳಗೆ ಸಿಸಿ ಕ್ಯಾಮರಾ ಅಳವಡಿಸಲು ಆಯಿಲ್ ಕಂಪೆನಿಗಳ ಸಭೆ ನಡೆಸಿ ಸೂಚನೆ ನೀಡುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ 147 ಪೆಟ್ರೋಲ್ ಬಂಕ್‌ಗಳ ಪೈಕಿ 76 ಪಂಪ್‌ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿರುವುದಾಗಿ ಸಂಬಂಧಪಟ್ಟ ಅಧಿಕಾರಿ ಸಭೆಯಲ್ಲಿ ತಿಳಿಸಿದಾಗ, ಇತರ ಪೆಟ್ರೋಲ್ ಬಂಕ್‌ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಏನು ತೊಂದರೆ ಎಂದು ಜಿಲ್ಲಾಧಿಕಾರಿ ಪ್ರಶ್ನಿಸಿದರಲ್ಲದೆ, ತಕ್ಷಣ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.

ಅಧಿಕಾರಿಗಳು ಸಿಸಿ ಕ್ಯಾಮರಾ ಅಳವಡಿಕೆಯನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಬೇಕು. ಕ್ಯಾಮರಾ ಹಾಕಲು ಬಯಸದವರು ಆ ಬಗ್ಗೆ ಲಿಖಿತವಾಗಿ ತಿಳಿಸಿದರೆ ಮುಂದಿನ ಕ್ರಮವನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ ಎಂದು ಅವರು ಎಚ್ಚರಿಸಿದರು. ಜಾತ್ರಾ ಮಹೋತ್ಸವಕ್ಕೆ ಮುನ್ನ ಸಿಸಿ ಕ್ಯಾಮರಾ ಅಳವಡಿಕೆಯಾಗಲಿ: ಪ್ರಸಕ್ತ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವಗಳಿಗೆ ಮೊದಲು ಜಿಲ್ಲೆಯ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಕಾರ್ಯ ಪೂರ್ಣಗೊಳ್ಳಬೇಕು. ಅಲ್ಲದೆ ಈ ಸಂಬಂಧ ಎಲ್ಲಾ ಧಾರ್ಮಿಕ ಕೇಂದ್ರಗಳು ಮುಂದಿನ 15 ದಿನಗಳೊಳಗೆ ವರದಿ ನೀಡುವಂತೆ ನಿರ್ದೇಶನ ನೀಡಬೇಕೆಂದು ಅಪರ ಜಿಲ್ಲಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿ ಮಾತನಾಡುತ್ತಾ, ಜಿಲ್ಲೆಯ ‘ಎ’ ವಿಭಾಗದ 44 ದೇವಸ್ಥಾನಗಳಲ್ಲಿ ಈಗಾಗಲೇ ಸಿಸಿಟಿವಿ ಅಳವಡಿಸಲಾಗಿದೆ. ‘ಬಿ’ ವಿಭಾಗದ 25ರ ಪೈಕಿ 23ಕ್ಕೆ ಅಳವಡಿಕೆ ಕಾರ್ಯ ನಡೆದಿದ್ದು, ದೇವಸ್ಥಾನ ಕಟ್ಟಡ ಕಾಮಗಾರಿ ಹಿನ್ನೆಲೆಯಲ್ಲಿ ಎರಡು ದೇವಸ್ಥಾನಗಳಲ್ಲಿ ಸಿಸಿಟಿವಿ ಅಳವಡಿಸಲಾಗಿಲ್ಲ. ಜಿಲ್ಲೆಯಲ್ಲಿ ಒಟ್ಟು 427 ‘ಸಿ’ ವಿಭಾಗದ ದೇವಸ್ಥಾನಗಳಿದ್ದು, ಅವುಗಳಲ್ಲಿ 162ರಲ್ಲಿ ಕ್ಯಾಮರಾ ಅಳವಡಿಸಲಾಗಿದೆ ಎಂದರು.

ವಕ್ಫ್ ಬೋರ್ಡ್‌ಗೆ ಒಳಪಟ್ಟ 605 ಮಸೀದಿಗಳಲ್ಲಿ ಸಿಸಿ ಕ್ಯಾಮರಾ ಅಳಡಿಸಿರುವ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ ಎಂದು ಸಂಬಂಧಪಟ್ಟ ಅಧಿಕಾರಿ ತಿಳಿಸಿದಾಗ, ಸಮರ್ಪಕ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. 620 ಶಾಲೆಗಳಲ್ಲಿ ಸಿಸಿ ಕ್ಯಾಮರಾ: ವಿದ್ಯಾಂಗ ಉಪ ನಿರ್ದೇಶಕ ವಾಲ್ಟರ್ ಡಿಮೆಲ್ಲೊ ಮಾತನಾಡಿ, ಜಿಲ್ಲೆಯ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಒಟ್ಟು 1975 ಶಾಲೆಗಳ ಪೈಕಿ 620 ಶಾಲೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ.

301 ಅನುದಾನರಹಿತ ಪ್ರಾಥಮಿಕ ಶಾಲೆಗಳ ಪೈಕಿ 219, 240 ಅನುದಾನರಹಿತ ಪ್ರೌಢಶಾಲೆಗಳ ಪೈಕಿ 183, 219 ಅನುದಾನಿತ ಹಿಪ್ರಾ ಶಾಲೆಗಳ ಪೈಕಿ 96, 121 ಅನುದಾನಿತ ಪ್ರೌಢಶಾಲೆಗಳ ಪೈಕಿ 88 ಶಾಲೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. 927 ಸರಕಾರಿ ಪ್ರಾಥಮಿಕ ಶಾಲೆಗಳ ಪೈಕಿ ಕೇವಲ 3 ಮತ್ತು 167 ಸರಕಾರಿ ಪ್ರೌಢಶಾಲೆಗಳಲ್ಲಿ 31 ಶಾಲೆಗಳಿಗೆ ಸಿಸಿಟಿವಿ ಅಳವಡಿಸಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯ 53 ಪ್ರಥಮ ದರ್ಜೆ ಕಾಲೇಜುಗಳ ಪೈಕಿ 40 ಕಾಲೇಜುಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಅಲ್ಲದೆ ಜಿಲ್ಲೆಯ 37 ಗ್ಯಾಸ್ ಏಜೆನ್ಸಿಗಳ ಪೈಕಿ 18 ಕಡೆ ಆಳವಡಿಸಲಾಗಿದೆ. 451 ಬಾರ್‌ಗಳ ಪೈಕಿ 440ಕ್ಕೆ ಈಗಾಗಲೇ ಸಿಸಿಟಿವಿ ಅಳವಡಿಸಲಾಗಿದೆ. ಜಾಲ್ಸೂರು ಚೆಕ್‌ಪೋಸ್ಟ್ ಬಳಿ ಹಾಕಲಾಗಿದ್ದು, ಉಳಿದೆಡೆಗಳ ಚೆಕ್‌ಪೋಸ್ಟ್‌ಗಳಲ್ಲಿ ಸಿಸಿಟಿವಿ ಅಳವಡಿಸುವ ಕುರಿತು ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.

8 ಮೊರಾರ್ಜಿ ದೇಸಾಯಿ ವಸತಿ ಶಾಲೆ, 70 ಹಿಂದುಳಿದ ವರ್ಗಗಳ ವಸತಿ ಶಾಲೆ, 19 ಐಟಿಡಿಪಿ, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ 28 ಹಾಸ್ಟೆಲ್‌ಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಅಧಿಕಾರಿ ಡಾ. ಸಂತೋಷ್ ಕುಮಾರ್ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಎಸ್. ಕುಮಾರ್, ಡಿಸಿಪಿ ಶಾಂತರಾಜು, ಮಹಾನಗರ ಪಾಲಿಕೆ ಆಯುಕ್ತ ಡಾ. ಎಚ್. ಎನ್. ಗೋಪಾಲಕೃಷ್ಣ ಉಪಸ್ಥಿತರಿದ್ದರು.

ಗುಣಮಟ್ಟ ಸಮರ್ಪಕವಾಗಿರಲಿ: ಎಸ್ಪಿ

ಖಾಸಗಿ ಸಂಸ್ಥೆಗಳು ಹಾಗೂ ಪೆಟ್ರೋಲ್ ಬಂಕ್‌ಗಳಲ್ಲಿ ಮುಖ್ಯವಾಗಿ ತಮ್ಮ ಉದ್ಯೋಗಿಗಳ ಮೇಲೆ ನಿಗಾ ಇಡುವುದಕ್ಕೆ ಪೂರಕವಾಗಿ ಮಾತ್ರವೇ ಸಿಸಿ ಕ್ಯಾಮರಾಗಳನ್ನು ಅಳವಡಿಸುತ್ತಾರೆ. ಅಹಿತಕರ ಘಟನೆಗಳ ಸಂದರ್ಭ ಸುರಕ್ಷತೆಯ ದೃಷ್ಟಿಯಿಂದ ಗುಣಮಟ್ಟದ ಸಿಸಿ ಕ್ಯಾಮರಾಗಳನ್ನು ಯಾವುದೇ ಸಂಸ್ಥೆಯ ಪ್ರವೇಶ ದ್ವಾರ ಹಾಗೂ ರಸ್ತೆಯಿಂದ ಒಳ ಹೊರ ಹೋಗುವವರು ಕಾಣುವಂತೆ ಅಳವಡಿಸುವುದು ಸೂಕ್ತ. ಮಂಗಳೂರು ನಗರದಲ್ಲಿ ಅಳವಡಿಸಲು ಸೂಚಿಸಿರುವಂತೆ ಜಿಲ್ಲೆಯ ಇತರ ತಾಲೂಕು ಕೇಂದ್ರಗಳಲ್ಲಿಯೂ ಸಿಸಿ ಕ್ಯಾಮರಾ ಅಳವಡಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶರಣಪ್ಪ ಎಸ್.ಡಿ. ಸಲಹೆ ನೀಡಿದರು.

ವರದಿ ಕೃಪೆ : ವಾಭಾ

Write A Comment