ಕನ್ನಡ ವಾರ್ತೆಗಳು

ಪರೀಕ್ಷಾ ಫಲಿತಾಂಶ ಗೊಂದಲ ನಿವಾರಿಸಲು ಆಗ್ರಹಿಸಿ ಕ್ಯಾಂಪಸ್ ಫ್ರಂಟ್‌ನಿಂದ ಪ್ರತಿಭಟನೆ

Pinterest LinkedIn Tumblr

Campus_Front_Protst_1

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾ ಫಲಿತಾಂಶದಲ್ಲಿ ಉಂಟಾದ ಗೊಂದಲವನ್ನು ನಿವಾರಿಸುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ.ಕ ಜಿಲ್ಲಾವತಿಯಿಂದ ಇಂದು ಮಂಗಳ ಗಂಗೋತ್ರಿಯಲ್ಲಿರುವ ಮಂಗಳೂರು ವಿವಿಯ ಆಡಳಿತ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ವಿಶ್ವವಿದ್ಯಾನಿಲಯಗಳ ವ್ಯಾಪ್ತಿಗೆ ಬರುವ ಕಲೇಜುಗಳಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶವು ಗೊಂದಲದಿಂದ ಕೂಡಿದ್ದು, ಇದನ್ನು ಸರಿಪಡಿಸುವಂತೆ ಕ್ಯಾಂಪಸ್ ಫ್ರಂಟ್ ಈ ಹಿಂದ ಎರಡು ಬಾರಿ ವಿವಿ ಅಧಿಕಾರಿಗಳಿಗೆ ಮನವಿಯನ್ನು ಮಾಡಿತ್ತು. ಆದರೆ ವಿವಿ ಅಧಿಕಾರಿಗಳು ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಲಿಲ್ಲ ಎಂದು ಆರೋಪಿಸಿರುವ ಕ್ಯಾಂಪಸ್ ಫ್ರಂಟ್ ಫ್ರಂಟ್ ಆಫ್ ಇಂಡಿಯಾ ಪದಾಧಿಕಾರಿಗಳು ಈ ಹಿನ್ನೆಲೆಯಲ್ಲಿ ಇಂದು ವಿವಿಯ ಆಡಳಿತ ಕಛೇರಿಗೆ ವಿದ್ಯಾರ್ಥಿ ಜಾಥಾ ನಡೆಸಿ, ವಿವಿ ಆಡಳಿತ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

Campus_Front_Protst_2 Campus_Front_Protst_3 Campus_Front_Protst_4

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ರಾಜ್ಯ ಉಪಾಧ್ಯಕ್ಷ ಮುಹಮ್ಮದ್ ತಫ್ಸೀರ್, ವಿವಿಯು ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ, ಇಂತಹ ಗೊಂದಲಮಯ ಫಲಿತಾಂಶದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ ಎಂದು ಹೇಳಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತುಫೈಲ್ ಮಾತನಾಡಿ, ವಿವಿಯು ಫಲಿತಾಂಶವನ್ನು ಸರಿಪಡಿಸದಿದ್ದಲ್ಲಿ ರಾಜ್ಯಾದ್ಯಂತ ಇದರ ವಿರುದ್ದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದು ಸ್ಥಳಕ್ಕಾಗಮಿಸಿದ ಮಂಗಳೂರು ವಿವಿ ರಿಜಿಸ್ಟ್ರಾರ್ ಟಿ.ಡಿ. ಕೆಂಪರಾಜು ಹಾಗೂ ವಿವಿ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ವಿದ್ಯಾರ್ಥಿಗಳ ಮನವಿಯನ್ನು ಆಲಿಸಿ, ಮಾರ್ಚ್ ೨೮ರ ಒಳಗಾಗಿ ಫಲಿತಾಂಶವನ್ನು ಸರಿಪಡಿಸುವುದಾಗಿಯೂ ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿಯೂ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಈ ಸಂದರ್ಭದಲ್ಲಿ ವಿ.ವಿ. ರಿಜಿಸ್ಟ್ರಾರ್ ಜೊತೆ ಈ ಎಲ್ಲಾ ಗೊಂದಲಗಳಿಗೆ ಕಾರಣವಾದ ಖಾಸಗಿ ಕಂಪೆನಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿ ಸಮೂಹವು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್, ಬಂಟ್ವಾಳ ತಾಲೂಕು ಅಧ್ಯಕ್ಷ ಅಶ್ವಾನ್ ಸಾದಿಕ್, ಕಾರ್ಯದರ್ಶಿ ನಿಝಾಮುದ್ದೀನ್ ಮುಂತಾದವರು ಉಪಸ್ಥಿತರಿದ್ದರು. ಜಿಲ್ಲೆಯ ಹಲವಾರು ಕಾಲೇಜಿನಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Write A Comment