ಕನ್ನಡ ವಾರ್ತೆಗಳು

ನೀರಿನ ಸಮಸ್ಯೆಗಳ ಕರೆಗೆ ಸ್ಪಂದಿಸದೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿನ ಕ್ರಮ :ಸಚಿವ ರೈ

Pinterest LinkedIn Tumblr

Water_prblm_meet_1

ಮಂಗಳೂರು,ಮೇ.06  : ದ.ಕ. ಜಿಲ್ಲೆಯಾದ್ಯಂತ ಮಂಗಳೂರು ಮತ್ತು ಗ್ರಾಮಾಂತರ ಪ್ರದೇಶಗಳಲ್ಲೂ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿರುವುದರಿಂದ, ಕುಡಿಯುವ ನೀರು ಪೋರೈಸುವ ಉತ್ತರದಾಯಿತ್ವವನ್ನು ಅಧಿಕಾರಿಗಳು ಸಮರ್ಥವಾಗಿ ನಿರ್ವಹಿಸಬೇಕು, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಎಚ್ಚರಿಸಿದ್ದಾರೆ.

ಮಂಗಳೂರು ಗ್ರಾಮಾಂತರ ಮತ್ತು ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆ ಕುರಿತು ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಪರಿಶೀಲನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಹೊರತಾಗಿಯೂ ಮಂಗಳೂರು ತಾಲೂಕಿನಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದೆ ಎಂದು ಹೇಳಿದರು.

ನೀರಿನ ಸಮಸ್ಯೆ ಕುರಿತು ಸಾರ್ವಜನಿಕರಿಂದ ಬರುವ ಕರೆಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಿ ಪೂರಕ ವ್ಯವಸ್ಥೆ ಕಲ್ಪಿಸಬೇಕು. ಪಿಡಿಒ, ನೀರು ಸರಬರಾಜು ವಿಭಾಗಧಿಗಳಿಗೆ ಸಂಬಂಧಪಟ್ಟ ಎಂಜಿನಿಯರ್‌, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲಾಧಿಕಾರಿ ಅಥವಾ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಂದ ಪೂರ್ವಾನುಮತಿ ಪಡೆಯದೆ ಕೇಂದ್ರಸ್ಥಾನ ಬಿಟ್ಟು ಅಥವಾ ರಜೆಯ ಮೇಲೆ ತೆರಳಬಾರದು. ಇದನ್ನು ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಅಮಾನತು ಸೇರಿದಂತೆ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದರು.

Water_prblm_meet_2 Water_prblm_meet_3 Water_prblm_meet_4

ಅವಶ್ಯ ಬಿದ್ದರೆ ಖಾಸಗಿ ಬೋರ್‌ವೆಲ್‌, ಬಾವಿಗಳ ವಶ
ಸಾರ್ವಜನಿಕ ಬೋರ್‌ವೆಲ್‌, ಬಾವಿಗಳಲ್ಲಿ ನೀರು ಲಭ್ಯತೆ ಇಲ್ಲದ ಸಂದರ್ಭ ಕುಡಿಯುವ ನೀರು ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳೀಯವಾಗಿ ಖಾಸಗಿಯವರ ಬೋರ್‌ವೆಲ್‌, ಬಾವಿಗಳ ಮಾಲಕರನ್ನು ಸಂಪರ್ಕಿಸಿ ನೀರು ಪೂರೈಕೆಗೆ ವ್ಯವಸ್ಥೆ ಮಾಡಬೇಕು. ಅವಶ್ಯಬಿದ್ದರೆ ಇವುಗಳನ್ನು ವಶಪಡಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಬಿ.ರಮಾನಾಥ ರೈ ಸೂಚಿಸಿದರು.

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೂಡಾ ಅಧ್ಯಕ್ಷ್ಯ ಇಬ್ರಾಹಿಂ ಕೋಡಿಜಾಲ್, ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್‌, ಜಿ.ಪಂ. ಸಿಇಒ ಶ್ರೀವಿದ್ಯಾ, ಮನಪಾ ಆಯುಕ್ತ ಡಾ. ಎಚ್‌.ಎನ್‌. ಗೋಪಾಲಕೃಷ್ಣ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

Write A Comment