ರಾಷ್ಟ್ರೀಯ

ವಿವಾದಾತ್ಮಕ ಹೇಳಿಕೆ: ಸಂಸತ್ತಿನಲ್ಲಿ ಕ್ಷಮೆಯಾಚಿಸಿದ ಕೇಂದ್ರ ಸಚಿವೆ: ಸಾಧ್ವಿ ನಿರಂಜನ್ ಜ್ಯೋತಿ

Pinterest LinkedIn Tumblr

saadvi

ನವದೆಹಲಿ: ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ಮಂಗಳವಾರ ಸಂಸತ್ತಿನಲ್ಲಿ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಇಂದು ಬೆಳಗ್ಗೆಯಷ್ಟೇ ಪಕ್ಷದ ಸಂಸದರ ಸಭೆ ನಡೆಸಿದ್ದ ಪ್ರಧಾನಿ ಮೋದಿ, ಸಾರ್ವಜನಿಕವಾಗಿ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಸೂಚಿಸಿದ್ದರು ಮತ್ತು ಇಂಥಹ ಹೇಳಿಕೆಗೆಳನ್ನು ನಾನು ಸಹಿಸಿಕೊಳ್ಳುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿರಂಜನ್ ಜ್ಯೋತಿ ಅವರು ಇಂದು ಸಂಸತ್‌ನಲ್ಲಿ ಕ್ಷಮೆಯಾಚಿಸಿದ್ದಾರೆ.

ನಾನು ಯಾರನ್ನು ನೋಯಿಸುವ ಉದ್ದೇಶದಿಂದ ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ಬೇಷರತ್ ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ.

ಸಚಿವೆಯ ವಿವಾದಾತ್ಮಕ ಹೇಳಿಕೆ ಇಂದು ಸಂಸತ್‌ನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತು. ನಿರಂಜನ್ ಜ್ಯೋತಿ ಅವರ ಹೇಳಿಕೆಯನ್ನು ಖಂಡಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದವು. ಅಲ್ಲದೆ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪಷ್ಟನೆ ನೀಡಬೇಕು ಮತ್ತು ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದವು. ಇದರಿಂದ ಒಂದು ಗಂಟೆಗಳ ಕಾಲ ಎರಡೂ ಸದನಗಳ ಕಲಾಪವನ್ನು ಮುಂದೂಡಲಾಯಿತು.

ತಿಂಗಳ ಹಿಂದಷ್ಟೆ ಕೇಂದ್ರ ಸಚಿವೆಯಾಗಿ ಅಧಿಕಾರ ವಹಿಸಿಕೊಂಡಿದ್ದ ನಿರಂಜನ್ ಜ್ಯೋತಿ ಅವರು, ದೆಹಲಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ‘ಭಾರತದಲ್ಲಿನ ಎಲ್ಲಾ ಮುಸ್ಲಿಮರು ಹಾಗೂ ಕ್ರಿಶ್ಚಿಯನ್ನರು ರಾಮನ ಮಕ್ಕಳು. ಇದನ್ನು ಒಪ್ಪದ ಮುಸ್ಲಿಮರು ಹಾಗೂ ಕ್ರಿಶ್ಚಿಯನ್ನರು ದೇಶ ಬಿಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅಲ್ಲದೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಅಳಿಯ ರಾಬರ್ಟ್ ವಾದ್ರಾ ವಿರುದ್ಧವೂ ವಾಗ್ದಾಳಿ ನಡೆಸಿದ್ದ ಸಚಿವೆ, ಒಂದು ಸಾಮಾನ್ಯ ಕುಟುಂಬದಿಂದ ಬಂದ ವಾದ್ರಾ ಈಗ ಕೋಟ್ಯಾಧಿಪತಿ ಆಗಿದ್ದು ಹೇಗೆ ಎಂದು ಪ್ರಶ್ನಿಸಿದ್ದರು.

Write A Comment