ನವದೆಹಲಿ: ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೆ ಆಗ್ರಹಿಸಿ ನಿವೃತ್ತ ಯೋಧರು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ ಬೆಂಬಲ ನೀಡಿದ ಬೆನ್ನಲ್ಲೇ, ಎನ್‌ಡಿಎ ಸರ್ಕಾರ ಎಲ್ಲಾ ಭರವಸೆಗಳನ್ನು ಈಡೇರಿಸಲಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವರು, ಚುನಾವಣೆ ವೇಳೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಲು ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ. ಆದರೆ ಕೆಲವು ತಾಂತ್ರಿಕ ಕಾರಣಗಳಿಂದ ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೊಳಿಸಲು ವಿಳಂಬವಾಗುತ್ತಿದೆ ಎಂದು ಹೇಳಿದರು.
ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೆ ಆಗ್ರಹಿಸಿ ನಿವೃತ್ತ ಸೈನಿಕರು ಕಳೆದ ಎರಡು ತಿಂಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಅವರನ್ನು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಲು ದೆಹಲಿ ಪೊಲೀಸರು ಯತ್ನಿಸಿದರು. ಆದರೆ ಪೊಲೀಸರ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರೆಸಲು ಅವಕಾಶ ನೀಡಲಾಗಿದೆ.