ನವದೆಹಲಿ: ಗೋಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ಮುಖಂಡರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ, ಭಾನುವಾರ ಬಿಜೆಪಿ ಹೈಕಮಾಂಡ್ ನಾಲ್ಕು ಮುಖಂಡರಿಗೆ ಸಮನ್ಸ್ ಜಾರಿ ಮಾಡಿದೆ.
ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಕೇಂದ್ರ ಸಚಿವ ಮಹೇಶ್ ಶರ್ಮಾ, ಬಿಜೆಪಿ ಮುಖಂಡ ಮತ್ತು ಸಂಸದ ಸಾಕ್ಷಿ ಮಹಾರಾಜ್ ಮತ್ತು ಸಂಗೀತ್ ಸೋಮ್ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸಮನ್ಸ್ ಜಾರಿ ಮಾಡಿದ್ದಾರೆ. ಇಂದು ದೆಹಲಿಯಲ್ಲಿರುವ ಬಿಜೆಪಿ ಕಚೇರಿಗೆ ಕರೆಸಿಕೊಂಡು ಮುಖಂಡರೊಂದಿಗೆ ಚರ್ಚಿಸಿದ ಶಾ, ಗೋ ಹತ್ಯೆ ಮತ್ತು ಗೋ ಮಾಂಸ ವಿಚಾರ ಕುರಿತಂತೆ ಮನಸೋ ಇಚ್ಛೆ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಿದ್ದಾರೆ.
ಅಲ್ಲದೆ ಈ ನಾಲ್ಕು ಮಂದಿಗೆ ಸಮನ್ಸ್ ಕೂಡ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ದಾದ್ರಿ ಪ್ರಕರಣವನ್ನು ಉದ್ದೇಶಿಸಿ ಗೋ ಮಾಂಸ ಭಕ್ಷಣೆ ಕುರಿತಂತೆ ಹೇಳಿಕೆ ನೀಡಿದ್ದ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು, ಭಾರತದಲ್ಲಿ ಮುಸ್ಲಿಮರು ನೆಲೆಸಬೇಕು ಎಂದಿದ್ದಲ್ಲಿ ಗೋ ಮಾಂಸ ಭಕ್ಷಣೆ ಬಿಡಬೇಕು. ಇಲ್ಲವಾದಲ್ಲಿ ಪಾಕಿಸ್ತಾನಕ್ಕೆ ತೆರಳಬಹುದು ಎಂದು ಹೇಳಿದ್ದಾರೆ ಎಂದು ಹೇಳಲಾಗುತ್ತಿತ್ತು. ಇದು ಮಾಧ್ಯಮವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಬಳಿಕ ಎಚ್ಚಿತ್ತ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದರು.
ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಮಹೇಶ್ ಶರ್ಮಾ, ಸಂಸದ ಸಾಕ್ಷಿ ಮಹಾರಾಜ್ ಮತ್ತು ಬಿಜೆಪಿ ಮುಖಂಡ ಸಂಗೀತ್ ಸೋಮ್ ಕೂಡ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಮುಜುಗರವನ್ನುಂಟು ಮಾಡಿದ್ದರು. ಈ ಹಿನ್ನಲೆಯಲ್ಲಿ ಇಂದು ಈ ನಾಲ್ಕು ಮುಖಂಡರ ವಿರುದ್ಧ ಸಮನ್ಸ್ ಜಾರಿ ಗೊಳಿಸುವ ಮೂಲಕ ಬಿಜೆಪಿ ಹೈಕಮಾಂಡ್ ಪಕ್ಷದ ಇತರೆ ಮುಖಂಡರಿಗೆ ಪರೋಕ್ಷ ಎಚ್ಚರಿಕೆ ನೀಡಿದೆ.
