ರಾಷ್ಟ್ರೀಯ

ಆಸ್ಸಾಂ: ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡ 9 ಕಾಂಗ್ರೆಸ್ ಶಾಸಕರು

Pinterest LinkedIn Tumblr

bjpಗುವಾಹಟಿ: ಆಸ್ಸಾಂ ರಾಜ್ಯದ ಕಾಂಗ್ರೆಸ್‌ನ ಒಂಬತ್ತು ಬಂಡಾಯ ಶಾಸಕರು ಇಂದು ಹಿರಿಯ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಅಧಿಕಾರರೂಢ ಪಕ್ಷವಾಗಿರುವ ಕಾಂಗ್ರೆಸ್‌ನ 9 ಮಂದಿ ಶಾಸಕರು, ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಸರ್ಬಾನಂದ್ ಸೋನೋವಾಲ್ ಅವರೊಂದಿಗೆ ಚರ್ಚಿಸಿದ ನಂತರ ಬಿಜೆಪಿ ಪಕ್ಷಕ್ಕೆ ಸೇರುವ ಬಗ್ಗೆ ಖಚಿತಪಡಿಸಿದ್ದರು.

ಮುಂದಿನ ವರ್ಷ ವಿಧಾನಸಭೆಗೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ 9 ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದರಿಂದ ಬಿಜೆಪಿಗೆ ಮತ್ತಷ್ಟು ಬಲ ಬಂದಂತಾಗಿದೆ ಎಂದು ಹಿರಿಯ ಬಿಜೆಪಿ ನಾಯಕರು ತಿಳಿಸಿದ್ದಾರೆ.

ಆಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೈಯವರಿಗೆ ಶಾಸಕರ ಬೆಂಬಲವಿಲ್ಲದಿದ್ದರೂ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಯಿತು. ಹಿಮಾಂತಾ ಬಿಸ್ವಾ ಸರ್ಮಾ ಅವರಿಗೆ 54 ಶಾಸಕರು ಬೆಂಬಲ ಸೂಚಿಸಿದ್ದರೂ ಅವರನ್ನು ಸಿಎಂ ಹುದ್ದೆಗೆ ತಿರಸ್ಕರಿಸಿರುವುದು ನಮಗೆ ನೋವು ತಂದಿದ್ದರಿಂದ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಪಿಜುಶ್ ಹಜಾರಿಕಾ ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಆಸ್ಸಾಂ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಸಾಗಿಸಬೇಕು ಎನ್ನುವ ಉದ್ದೇಶದಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇವೆ. ಆಸ್ಸಾಂ ಅಭಿವೃದ್ಧಿಗಾಗಿ ಇಂತಹ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಧಾನ್ ಬರುವಾ, ಜಯಂತಾ ಮಲ್ಲಾ ಬರುವಾ, ಪಿಯುಶ್ ಹಜಾರಿಕಾ ಮತ್ತು ಪಲ್ಲಬ್ ಲೋಚನ್ ದಾಸ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅಮಾನತ್ತುಗೊಳಿಸಲಾಗಿತ್ತು.

ಕಾಂಗ್ರೆಸ್ ಪಕ್ಷದ 9 ಶಾಸಕರು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಆಸ್ಸಾಂ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಅಂಜನ್ ದತ್ತಾ, 9 ಶಾಸಕರು ಬಿಜೆಪಿಗೆ ಹೋಗಿದ್ದರಿಂದ ಮುಂಬರುವ ಚುನಾಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವುದಿಲ್ಲ ಎಂದು ತಿಳಿಸಿದ್ದಾರೆ.

Write A Comment