ಶಿವಮೊಗ್ಗ , ಡಿ.23- ಕಳೆದ 9 ತಿಂಗಳಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣವಾಗಿ ಸ್ಥಗಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಜೀವನದ ಜತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ಸ್ಥಗಿತವಾಗಿವೆ. ಕಳೆದ 10 ವರ್ಷಗಳಲ್ಲಿ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ನಿರ್ಮಾಣವಾಗಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲ ಎಂದು ಅವರು ಹೇಳಿದ್ದಾರೆ. ಸಚಿವರು, ಅಧಿಕಾರಿಗಳು ವಿಧಾನಸೌಧಕ್ಕೆ ಬರುತ್ತಿಲ್ಲ. ಇದರಿಂದ ಜನರಿಗೆ ಮೂಲ ಸೌಕರ್ಯಗಳನ್ನು ನೀಡಲು ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ವೈಯಕ್ತಿಕ ಲಾಭಕೋಸ್ಕರ 1750 ಬಾರ್‌ಗಳಿಗೆ ಲೈಸೆನ್ಸ್ ನೀಡಲು ಮುಂದಾಗಿದ್ದಾರೆ. ಜನಸಾಮಾನ್ಯರ ಅಭಿವೃದ್ಧಿಗಿಂತ ಲಿಕ್ಕರ್ ಲಾಬಿ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ. ತಾಪಂ, ಜಿಪಂ ಚುನಾವಣೆಗೆ ಸಧ್ಯದಲ್ಲೇ ನೀತಿ ಸಂಹಿತೆ ಜಾರಿಯಾಗಲಿದೆ. ರಾಜ್ಯದಲ್ಲಿ ಮತ್ತೆ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗುತ್ತವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚೆತ್ತುಕೊಳ್ಳಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.