ಹೈದರಾಬಾದ್: ಹೈದರಾಬಾದ್ ವಿವಿ ವಿದ್ಯಾರ್ಥಿ ರೋಹಿತ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯನ್ನು ಖಂಡಿಸಿ ಹೈದರಾಬಾದ್ ಸೇರಿದಂತೆ ದೇಶಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ದಲಿತ ವಿದ್ಯಾರ್ಥಿಯ ಸಾವಿಗೆ ಸಚಿವ ಬಂಡಾರು ದತ್ತಾತ್ರೇಯ ಅವರೇ ಕಾರಣ ಎಂದು ಆರೋಪಿಸುತ್ತಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ನವದೆಹಲಿ, ಪುಣೆ ಮತ್ತು ಮುಂಬೈನಲ್ಲೂ ಸಹ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ತೆಲಂಗಾಣ ಜಾಗೃತಿ ಎಂಬ ಸ್ವಯಂ ಸೇವಾ ಸಂಘಟನೆ ಸದಸ್ಯರು ಮತ್ತು ವಿದ್ಯಾರ್ಥಿಗಳು ಸಚಿವ ಬಂಡಾರು ದತ್ತಾತ್ರೇಯ ಅವರ ಹೈದರಾಬಾದ್ನ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು ಮತ್ತು ಸಚಿವರ ರಾಜೀನಾಮೆಗೆ ಒತ್ತಾಯಿಸಿದರು.
ದಲಿತ ವಿದ್ಯಾರ್ಥಿ ಆತ್ಮಹತ್ಯೆಯನ್ನು ಖಂಡಿಸಿ ಪುಣೆಯ ಎಫ್ಟಿಐಐ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ಭೇಟಿ ಮಾಡಲು ಹೈದರಾಬಾದ್ಗೆ ಆಗಮಿಸಿದ್ದು, ಶೀಘ್ರ ವಿದ್ಯಾರ್ಥಿಗಳನ್ನು ಭೇಟಿ ಮಾಡಲಿದ್ದಾರೆ.
ಇದೇ ಸಂದರ್ಭದಲ್ಲಿ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರೋಹಿತ್ ಆತ್ಮಹತ್ಯೆ ಪ್ರಜಾಪ್ರಭುತ್ವದ ಕಗ್ಗೊಲೆಗೆ ಒಂದು ಸ್ಪಷ್ಟ ನಿದರ್ಶನ, ಕೂಡಲೇ ಸಚಿವ ಬಂಡಾರು ದತ್ತಾತ್ರೇಯ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಸಹ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಸಚಿವರಾದ ಬಂಡಾರು ದತ್ತಾತ್ರೇಯ ಮತ್ತು ಸೃತಿ ಇರಾನಿ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದೆ. ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಪರಿಸ್ಥಿತಿಯನ್ನು ಅವಲೋಕಿಸಲು ಹೈದರಾಬಾದ್ಗೆ ಇಬ್ಬರು ಸದಸ್ಯರ ತಂಡವನ್ನು ಕಳುಹಿಸುತ್ತಿದ್ದಾರೆ.