ನವದೆಹಲಿ: ದೇಶ ದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರು ಜಾಮೀನು ಕೋರಿ ಗುರುವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಕನ್ಹಯ್ಯ ಕುಮಾರ್ ಪರ ವಕೀಲ ರಾಜುರಾಮಚಂದ್ರನ್ ಅವರು ಜಾಮೀನು ಇಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿದ ಕೋರ್ಟ್ ವಿಚಾರಣೆಯನ್ನು ಇಂದು ನಿಗದಿಪಡಿಸಿದೆ.
ಈಗಿರುವ ಸ್ಥಿತಿಯಲ್ಲಿ ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಹೀಗಾಗಿ ನೇರವಾಗಿ ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಿದ್ದು, ಸಂವಿಧಾನದ 32ನೇ ಕಲಂನಡಿ ಆರೋಪಿಗೆ ಜಾಮೀನು ನೀಡಬೇಕು ಎಂದು ಕನ್ಹಯ್ಯ ಕುಮಾರ್ ಅವರು ಮನವಿ ಮಾಡಿದ್ದಾರೆ.
ಕಳೆದ ಫೆ.9 ರಂದು ಜೆಎನ್ ಯು ವಿಶ್ವವಿದ್ಯಾನಿಲಯದಲ್ಲಿ ಕೆಲವು ವಿದ್ಯಾರ್ಥಿಗಳು ಉಗ್ರ ಅಫ್ಜಲ್ ಗುರು ಗಲ್ಲಿಗೇರಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ದೇಶವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ದೆಹಲಿ ಪೊಲೀಸರು ಫೆ.12ರಂದು ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷನನ್ನು ಬಂಧಿಸಿದ್ದು, ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.